

ರಾಂಚಿ: ಜಾರ್ಖಂಡ್ನ ರಾಮಗಢ ಜಿಲ್ಲೆಯ ರಾಂಚಿ-ಪಾಟ್ನಾ ಹೆದ್ದಾರಿಯಲ್ಲಿ ಭಾನುವಾರ(ನ. 29) ದೇವಸ್ಥಾನಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ಸ್ಕಾರ್ಪಿಯೋ ವಾಹನವೊಂದು ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 33ರಲ್ಲಿ ನಸುಕಿನ ಜಾವ ಸುಮಾರು 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಸ್ಥಳೀಯರು ಆಗಮಿಸಿ ರಕ್ಷಣೆ ಕಾರ್ಯಾಚರಣೆ ನಡೆಸಿದ್ದಾರೆ.
ಜಖಂಗೊಂಡ ವಾಹನದಿಂದ ಜನರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ವಾಹನದಲ್ಲಿದ್ದ 14 ಮಂದಿಯನ್ನು ಆಸ್ಪತ್ರೆಗೆ ತರುವಷ್ಟರಲ್ಲಿ ಅವರಲ್ಲಿ 13 ಜನ ಮೃತಪಟ್ಟಿದ್ದರು, ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸ್ಕಾರ್ಪಿಯೋ ವಾಹನದಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಬಿಹಾರದ ನಳಂದ ಜಿಲ್ಲೆಯ ಜಂಘಾರೋ ಗ್ರಾಮದ ನಿವಾಸಿಗಳಾಗಿದ್ದರು. ಪೂಜೆ ಸಲ್ಲಿಸಲು ರಾಜರಪ್ಪಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ (ಏಜೆನ್ಸೀಸ್).