ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ಶಿಫ್ಟ್!
ಹೋರಾಟಗಾರ ಸೋನಮ್ ವಾಂಗ್ಚುಕ್ರನ್ನು ದೆಹಲಿ ಪೊಲೀಸರು ಶನಿವಾರ ಮುಂಜಾನೆ ಜಂತರ್ ಮಂತರ್ ಪ್ರತಿಭಟನಾ ಸ್ಥಳದಿಂದ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.ವಾಂಗ್ಚುಕ್ ಉಪವಾಸ ಸತ್ಯಾಗ್ರಹವು 21ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯದ ಸ್ಥಿತಿಯನ್ನು ದೆಹಲಿ ಹೈಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ನ್ಯಾಯಾಲಯದ ಆದೇಶ ಹಾಗೂ ವೈದ್ಯಕೀಯ ತಜ್ಞರ ಸಲಹೆಯ ಮೇರೆಗೆ, ಅವರ ಕ್ಷೀಣಿಸುತ್ತಿರುವ ಆರೋಗ್ಯದ ದೃಷ್ಟಿಯಿಂದ ಅಗತ್ಯ ವೈದ್ಯಕೀಯ ಆರೈಕೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನವದೆಹಲಿಯ ಉಪ ಪೊಲೀಸ್ ಕಮಿಷನರ್ ಸಚಿನ್ ಶರ್ಮಾ ತಿಳಿಸಿದ್ದಾರೆ.
ಪತ್ನಿ ಗೀತಾಂಜಲಿ ಆಕ್ಷೇಪ!..
ಸೋನಮ್ ವಾಂಗ್ಚುಕ್ ಪತ್ನಿ ಗೀತಾಂಜಲಿ ಜೆ ಆಂಗ್ಮೋ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿದ್ದು, ತಮ್ಮ ಪತಿಯನ್ನು ಆಸ್ಪತ್ರೆಗೆ ದಾಖಲಿಸಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಶುಕ್ರವಾರದವರೆಗೆ ಅವರು ಆರಾಮವಾಗಿಯೇ ಇದ್ದರು, ಅವರನ್ನು ಆಸ್ಪತ್ರೆಗೆ ಕರೆತರುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆರ್ಟಿಕಲ್ 32 (Article 32) ಅಡಿಯಲ್ಲಿ ಇದು ನನ್ನ ಹಕ್ಕಾಗಿದೆ. ನನ್ನ, ನಮ್ಮ ಕುಟುಂಬದ ಹಾಗೂ ಕಳೆದ 20 ದಿನಗಳಿಂದ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿರುವ ವೈದ್ಯರ ಒಪ್ಪಿಗೆಯಿಲ್ಲದೆ ಅವರಿಗೆ ಯಾವುದೇ ರೀತಿಯ ಮೌಖಿಕ ಅಥವಾ ರಕ್ತನಾಳದ (Intravenous) ಚಿಕಿತ್ಸೆಯನ್ನು ನೀಡಬಾರದು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ(ಏಜೆನ್ಸೀಸ್).