ಜ. 20ರಂದು ಕಾರ್ಯಾಧ್ಯಕ್ಷ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಸಾಧ್ಯತೆ | Nitin Nabin

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬಿನ್
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬಿನ್
Published on
ನವದೆಹಲಿ: ಪಕ್ಷ ಸಂಘಟನೆಯ ಭಾಗವಾಗಿ ಇದೇ ತಿಂಗಳು ಜ. 20ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವರು ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬಳಿಕ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕಳೆದ ಡಿಸೆಂಬರ್‌ ಆರಂಭದಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆಯಾಗಿದ್ದರು. ಜ .19 ರಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದು, 20 ರಂದು ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ವರದಿಗಳು ಉಲ್ಲೇಖಿಸಿವೆ.
ಪಕ್ಷದ ಮೂಲಗಳ ಪ್ರಕಾರ, ಜ. 20ರಂದು ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಸಿಎಂಗಳು, ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪದಾಧಿಕಾರಿಗಳನ್ನು ದೆಹಲಿಯಲ್ಲಿರುವಂತೆ ಕೇಳಿಕೊಳ್ಳಲಾಗಿದೆ. ಬಿಜೆಪಿಯ ಮುಖ್ಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ್ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರ ಹೆಸರನ್ನು ಘೋಷಿಸಲಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಮೂರು ಸೆಟ್​ಗಳನ್ನು ನಾಮಪತ್ರಗಳ್ನ ಸಲ್ಲಿಸಲಿದ್ದು, ಒಂದು ಸೆಟ್​ನಲ್ಲಿ 20ಕ್ಕೂ ಹೆಚ್ಚು ಚುನಾಯಿತ ರಾಜ್ಯಾಧ್ಯಕ್ಷ ಸಹಿ, ಮತ್ತೊಂದರಲ್ಲಿ ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ ನಡ್ಡಾ ಅವರ ಸಹಿ ಇರುತ್ತದೆ. ಮೂರನೇ ಸೆಟ್​ನಲ್ಲಿ ಬಿಜೆಪಿ ರಾಷ್ಟ್ರೀಯ ಮಂಡಳಿಯ ಸದಸ್ಯರ ಸಹಿ ಇರುತ್ತದೆ. ಈ ಮೂರರಲ್ಲಿ ಒಂದೇ ಹೆಸರು ನಾಮನಿರ್ದೇಶನಗೊಂಡರೆ, ಅದೇ ದಿನ ರಾಷ್ಟ್ರೀಯ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಇತ್ತೀಚೆಗೆ ಸಭೆ ನಡೆದಿದ್ದು, ಬಿಜೆಪಿ ಅಧ್ಯಕ್ಷರ ಚುನಾವಣೆ ಸಂಬಂಧ ಚರ್ಚಿಸಿದ್ದಾರೆ. ಸಭೆಯಲ್ಲಿ ಕಾರ್ಯಾಧ್ಯಕ್ಷ ನಿತಿನ್ ನಬಿನ್, ಬಿ.ಎಲ್. ಸಂತೋಷ್, ಸುನಿಲ್ ಬನ್ಸಾಲ್, ಅರುಣ್ ಸಿಂಗ್ ಮತ್ತು ತರುಣ್ ಚುಗ್ ಉಪಸ್ಥಿತರಿದ್ದರು ಎನ್ನಲಾಗಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net