ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಅಗತ್ಯ ಕ್ರಮ

15M.D.R.1
ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ಡಾ.ಸ್ಮಿತಾರಾಮು, ರಾಮಲಿಂಗಯ್ಯ, ಬಿ.ಬಸವರಾಜು, ರವೀಂದ್ರ ಇದ್ದರು.
Published on

ಮದ್ದೂರು: ಪಟ್ಣಣದಲ್ಲಿ ರೇಷ್ಮೆ ಮಾರಕಟ್ಟೆ ನಿರ್ಮಾಣ ಮಾಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರು ರೇಷ್ಮೆ ಬೆಳೆಯುತ್ತಿದ್ದು, ಅದನ್ನು ಮಾರಾಟ ಮಾಡಲು ಚನ್ನಪಟ್ಟಣ, ರಾಮನಗರಕ್ಕೆ ತೆಗೆದುಕೊಂಡು ಹೋಗಬೇಕು. ಇದರಿಂದ ತೊಂದರೆಯಾಗುತ್ತಿದ್ದು ಇದನ್ನು ತಪ್ಪಿಸುವ ಉದ್ದೇಶದಿಂದ ಪಟ್ಟಣದ ರೇಷ್ಮೆ ಇಲಾಖೆಯ ಪಕ್ಕದಲ್ಲೇ ಸುಸಜ್ಜಿತವಾದ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡಲು ಸರ್ಕಾರದ ಗಮನಕ್ಕೆ ಈಗಾಗಲೇ ತರಲಾಗಿದೆ. ಇಲಾಖಾ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜ.11 ರಂದು ವಿಜಯವಾಣಿ ಪತ್ರಿಕೆಯಲ್ಲಿ ರೇಷ್ಮೆ ಮಾರುಕಟ್ಟೆಯಿಲ್ಲದೆ ಪರದಾಟ ಎಂಬ ಶೀಷಿಕೆಯಡಿಯಲ್ಲಿ ವಿಶೇಷ ವರದಿ ಮಾಡಿ ತಾಲೂಕಿನಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡಿ ರೇಷ್ಮೆ ಬೆಳೆಗಾರಿಗೆ ಅನುಕೂಲ ಮಾಡುವಂತೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿತ್ತು.

ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಳಿದುಕೊಳ್ಳದೆ ಪ್ರತಿನಿತ್ಯ ಬೇರೆ ಕಡೆಯಿಂದ ಬಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಕೆಲಸಗಳ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಳಿದುಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಳಿದುಕೊಳ್ಳಲು ಕ್ವಾಟ್ರಸ್ ಸಮಸ್ಯೆ ಇರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ಶೀಘ್ರವಾಗಿ ಕ್ವಾಟ್ರಸ್ ಸಮಸ್ಯೆ ಸರಿಪಡಿಸಿ ಅಧಿಕಾರಿಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ತಾಲೂಕಿನ ಕಬ್ಬಾರೆ, ಹಾಲಗಹಳ್ಳಿ, ಅಣ್ಣೂರು, ಚನ್ನಸಂದ್ರ ಸೇರಿದಂತೆ 16 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಮಾಹಿತಿ ತಿಳಿದುಬಂದಿದ್ದು, ಈ ಗ್ರಾಮಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ರೀಬೋರ್ ಮಾಡುವುದು, ಹೊಸದಾಗಿ ಬೋರ್‌ವೆಲ್ ಕೊರೆಸುವುದು ಸೇರಿದಂತೆ ಅಗತ್ಯ ಕ್ರಮಕೈಗೊಂಡು ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ತಹಸೀಲ್ದಾರ್ ಡಾ.ಸ್ಮಿತಾರಾಮು, ತಾಪಂ ಇಒ ರಾಮಲಿಂಗಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಜಿಪಂ ಸಹಾಯಕ ಕಾರ್ಯದರ್ಶಿ ರವೀಂದ್ರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net