

ಬೆಂಗಳೂರು: ರಾಮೇಶ್ಚರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ಕಚೇರಿ ಸ್ಫೋಟಿಸುವ ಸಂಚಿನ ಉಲ್ಲೇಖವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಖಚಿತಪಡಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆ ಸ್ಫೋಟದ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ ಎಂದು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.
ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ. ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ ಎಂದರು.
ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡಲು ಹೋಗಿದ್ದರು ಎಂದು ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ ಎಂದು ಡಾ.ಪರಮೇಶ್ವರ ಹೇಳಿದರು.