

ಶಿವಮೊಗ್ಗ: ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಶನಿವಾರ ಸಂಜೆ ನಗರಕ್ಕೆ ಆಗಮಿಸಿದ್ದು ನ. 10 ಹಾಗೂ 11ರಂದು ಜಲ-ಜನ ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ಮೂಲಕ ಅಭಿಯಾನವನ್ನು ಸ್ಮರಣೀಯಗೊಳಿಸಲು ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ನ.10ರ ಬೆಳಗ್ಗೆ 8.30ಕ್ಕೆ ಪ್ರಬುದ್ಧರ ಸಭೆಯನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ವಿವಿಧ ವಲಯಗಳ ವೃತ್ತಿಪರರು ಭಾಗವಹಿಸಿ ತುಂಗಾ ನದಿ ನೈರ್ಮಲ್ಯದ ದೃಷ್ಟಿಯಿಂದ ಸಲಹೆ ನೀಡುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಸಂಚಾಲಕ ಬಸವರಾಜ ಪಾಟೀಲ್ ವೀರಾಪುರ, ಪರ್ಯಾವರಣ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ.ಎಂ.ಕುಮಾರಸ್ವಾಮಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ನಟ ಪ್ರಕಾಶ್ ಬೆಳವಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ತುಂಗಾ ಆರತಿ: ನ. 10ರ ಸಂಜೆ 6ಕ್ಕೆ ಕೋರ್ಪಲಯ್ಯನ ಛತ್ರದಲ್ಲಿ ತುಂಗಾ ಆರತಿ ನಡೆಸಲಾಗುತ್ತದೆ. ಕೂಡಲಿ ಶೃಂಗೇರಿ ಮಠದ ಶ್ರೀ ಅಭಿನವ ಶಂಕರ ಭಾರತೀ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ನೂರಾರು ಸಂಖ್ಯೆಯಲ್ಲಿ ಮಾತೆಯರು, ನಾಗರಿಕರು ಭಾಗವಹಿಸುವರು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಪಾದಯಾತ್ರೆ ಸಂಚಾಲಕ ಗಿರೀಶ್ ಪಟೇಲ್, ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕ ಎಂ.ಶಂಕರ್, ಮಾಜಿ ಉಪಮೇಯರ್ ಸುರೇಖಾ ಮುರಳೀಧರ್ ಸುದ್ದಿಗೋಷ್ಠಿಯಲ್ಲಿದ್ದರು.
ಯುವ ಜಾಗೃತಿ ಸಮಾವೇಶ:ಕುವೆಂಪು ರಂಗಮಂದಿರದಲ್ಲಿ ನ.11ರ ಬೆಳಗ್ಗೆ 8ಕ್ಕೆ ಯುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ ವಿವಿಧ ಕಾಲೇಜುಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿಧಾನ ಪರಿಷತ್ ಸದಸ್ಯರು, ಶಾಸಕರು, ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿರುವರು. ಬಳಿಕ ಶಿವಮೊಗ್ಗದಿಂದ ಪಾದಯಾತ್ರೆ ಹರಿಹರದ ಕಡೆಗೆ ಪ್ರಯಾಣ ಬೆಳೆಸಲಿದೆ. ಸಾವಿರಾರು ವಿದ್ಯಾರ್ಥಿಗಳು ಗೋಂದಿಚಟ್ನಹಳ್ಳಿವರೆಗೆ ಪಾದಯಾತ್ರೆಯಲ್ಲಿ ತೆರಳುವರು.
ಉತ್ತಮ ಸ್ಪಂದನೆ: ನಾವು ನಡೆಸುತ್ತಿರುವ ಅಭಿಯಾನಕ್ಕೆ ಈವರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಶೃಂಗೇರಿ ಶಾರದಾ ಪೀಠದ ಶ್ರೀ ಭಾರತೀತೀರ್ಥ ಸ್ವಾಮೀಜಿ ಆಶೀರ್ವದಿಸಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಎಲ್ಲೆಡೆ ಸಾರ್ವಜನಿಕರಿಂದ ಹೆಚ್ಚಿನ ಸಹಕಾರ ಸಿಗುತ್ತಿದೆ. ನದಿ ಉಳಿವಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಪಾದಯಾತ್ರೆ ಬಳಿಕ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಲಾಗುವುದು ಎಂದು ಗಿರೀಶ್ ಪಟೇಲ್ ತಿಳಿಸಿದರು.