

ನವದೆಹಲಿ: ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದರು.
ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದರು. ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸದ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.
ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು.
ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ. ಸಮಾವೇಶ ಕುರಿತಂತೆ ಹೈಕಮಾಂಡ್ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದರು.
ಈ ಮುಂಚೆ ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು. ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಮತ್ತು ಪ್ರಿಯಾಂಕ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.