

ಬೆಂಗಳೂರು: ರಾಜಧಾನಿಯಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿಪಡಿಸಿಲ್ಲ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನ.17ಕ್ಕೆ ಕಂಬಳ ಆಯೋಜನೆ ಮಾಡಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಬೆಂಗಳೂರು ಕಂಬಳ ಸಮಿತಿಗೆ ಕಂಬಳ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ‘ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ ’(ಪೆಟಾ) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಬೆಂಗಳೂರು ಕಂಬಳ ಸಮಿತಿ ಪರ ವಕೀಲ ಬಿ. ವಿನೋದ್ ಕುಮಾರ್ ವಾದ ಮಂಡಿಸಿ, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿ ಆಗಿಲ್ಲ. ಆದರೆ, ನ. 17ರಂದು ದ.ಕ ಜಿಲ್ಲೆಯ ಪಿಲಿಕುಳದಲ್ಲಿ ಕಂಬಳ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆ ಕೂಡಲೇ ಪ್ರತಿಕ್ರಯಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ನಮಗೆ ದ.ಕ ಜಿಲ್ಲೆಯಲ್ಲಿ ಅಥವಾ ಪಿಲಿಕುಳದಲ್ಲಿ ಕಂಬಳ ನಡೆಯುವ ಬಗ್ಗೆ ಯಾವುದೇ ತರನಾದ ಆಕ್ಷೇಪವಿಲ್ಲ. ಆದರೆ, ಪಿಲಿಕುಳದಲ್ಲಿ ಮೃಗಾಲಯದ ಸಮೀಪ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದೆ.
ಈ ಬಗ್ಗೆ ನಮಗೆ ಅಸಮಾಧಾನವಿದೆ . ಅಷ್ಟೇ ಅಲ್ಲ, ಸ್ವತಃ ಮೃಗಾಲಯ ನಿರ್ದೇಶಕರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕಂಬಳದ ಸಂದರ್ಭದಲ್ಲಿ ಉಂಟಾಗುವ ಕೂಗಾಟದಿಂದ ಬೇರೆ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ. ನಮ್ಮದು ಸಹ ಅದೇ ವಾದವಾಗಿದೆ ಎಂದರು.
ಅಡ್ವೋಕೇಟ್ ಜನರಲ್ ಪ್ರತಿಕ್ರಿಯಿಸಿ, ಪಿಲಿಕುಳದಲ್ಲಿ ಕಳೆದ 15-20 ವರ್ಷಗಳಿಂದ ಕಂಬಳ ನಡೆಯುತ್ತಿದೆ ಎಂದರು. ಅದಕ್ಕೆ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ನಮ್ಮ ಆಕ್ಷೇಪ ಇಲ್ಲ. ಬೇರೆ ಕಡೆ ಕಂಬಳ ನಡೆಯಲಿ. ಆದರೆ, ಮೃಗಾಯಲಯದ ಸಮೀಪ ನಡೆಸುವುದಕ್ಕೆ ನಮ್ಮ ತಕರಾರು ಇದೆ ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಬಗ್ಗೆ ಆಕ್ಷೇಪಣಿಗಳಿದ್ದರೆ ಸಲ್ಲಿಸುವಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನ. 12ಕ್ಕೆ ಮುಂದೂಡಿತು.