ಗುರು ಸ್ಥಾನಕ್ಕೆ ಸರಿಸಾಟಿ ಯಾವುದೂ ಇಲ್ಲ

smg teachers
ಜಿಲ್ಲೆಯ ವಿವಿಧ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿ.ವೈ.ರಾಘವೇಂದ್ರ, ಎಸ್.ಎನ್.ಚನ್ನಬಸಪ್ಪ, ಎಸ್.ಎಲ್.ಬೋಜೆಗೌಡ, ಡಾ. ಆರ್.ಸೆಲ್ವಮಣಿ, ಜಿ.ಕೆ.ಮಿಥುನ್‌ಕುಮಾರ್, ಸ್ನೇಹಲ್, ಲೋಖಂಡೆ, ಸಿ.ಎಸ್.ಷಡಾಕ್ಷರಿ ಇತರರಿದ್ದರು.
Published on

ಶಿವಮೊಗ್ಗ: ಜಾಗತಿಕ ಮಟ್ಟದಲ್ಲಿ ಭಾರತ ಎತ್ತರದ ಸ್ಥಾನ ತಲುಪಿದೆ. ಎಲ್ಲೆಡೆ ಭಾರತದ ಹೆಸರು ರಾರಾಜಿಸುತ್ತಿದೆ. ಜಾಗತಿಕ ಸ್ಪರ್ಧೆಗೆ ಮಕ್ಕಳನ್ನು ಅಣಿಗೊಳಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.

ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕರೊನಾ ಸಂದರ್ಭ ಶಿಕ್ಷಕರು ಬಹಳಷ್ಟು ಸಮಸ್ಯೆಗಳನ್ನು ಎದುರಿಸಿದ್ದರು. ಮಕ್ಕಳ ಹಿತದೃಷ್ಟಿಯಿಂದ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದ್ದನ್ನು ಯಾರೂ ಮರೆಯುವಂತಿಲ್ಲ ಎಂದರು.
ಓರ್ವ ಶಿಕ್ಷಕ ಮನಸ್ಸು ಮಾಡಿದರೆ ಎಷ್ಟು ಎತ್ತರಕ್ಕೆ ಬೇಕಾದರೂ ಏರಬಲ್ಲ ಎಂಬುದಕ್ಕೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬದುಕೇ ನಿದರ್ಶನ. ರಾಷ್ಟ್ರದ ಉನ್ನತ ಸ್ಥಾನಕ್ಕೇರಿದರೂ ಅವರೆಂದೂ ಶಿಕ್ಷಕನ ಸ್ಥಾನವನ್ನು ಮರೆಯಲಿಲ್ಲ. ಇದು ಎಲ್ಲರಿಗೂ ಪ್ರೇರಣೆ ಎಂದು ಹೇಳಿದರು.
ಶಿಕ್ಷಕರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರ ಸ್ವಾಭಿಮಾನದ ಬದುಕಿಗೆ ಸರ್ಕಾರ ಗಮನ ಹರಿಸುತ್ತಿದೆ. ಜಿಲ್ಲೆಯವರೇ ಶಿಕ್ಷಣ ಸಚಿವರಾಗಿರುವುದರಿಂದ ಸಮಸ್ಯೆಗಳ ಪರಿಹಾರವೂ ಸುಲಭವಾಗಲಿದೆ. ಜಿಲ್ಲೆ ಅಭಿವೃದ್ಧಿ ಪಥದಲ್ಲಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನತೆ, ವಿದ್ಯಾರ್ಥಿಗಳ ಸ್ಪರ್ಧೆಗೆ ಅಗತ್ಯ ಸೌಲಭ್ಯಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಒದಗಿಸಲಿವೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಮಕ್ಕಳಿಗೆ ಮೊದಲು ಜೀವನದ ಶಿಕ್ಷಣ ಕಲಿಸಬೇಕಿದೆ. ಅದಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ. ಪಠ್ಯಪುಸ್ತಕದ ವಿಷಯದಲ್ಲಿ ರಾಜಕೀಯ ಮಾಡಬಾರದು. ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಹೆಚ್ಚಿದೆ. ಎಷ್ಟೇ ಸಮಸ್ಯೆಗಳಿದ್ದರೂ ಪ್ರಾಥಮಿಕ ಹಂತದಿಂದ ಕಾಲೇಜಿನ ಶಿಕ್ಷಣದವರೆಗೆ ಶಿಕ್ಷಕರ ಸಮೂಹ ಎಂದೂ ಎಡವಿಲ್ಲ ಎಂದು ಎಂದು ಹೇಳಿದರು.
ಜಿಲ್ಲೆಯ ವಿವಿಧ ತಾಲೂಕಿನ ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ 38 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಎಸ್.ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರನಾಯ್ಕ, ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net