

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಹೈಕೋರ್ಟ್ ಗುರುವಾರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣ ಸಂಬಂಧ ಗಿರೀಶ್ ಭಾರಧ್ವಾಜ್ ಹಾಗೂ ಆರ್.ಆನಂದಮೂರ್ತಿ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ ಹಾಗೂ ಕೆ.ವಿ.ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ನಿರ್ಧರಿಸಿ, ಯು -ಟರ್ನ್ ತೆಗೆದುಕೊಂಡಿರುವ ಸರ್ಕಾರದ ನಡೆ ಬಗ್ಗೆ ಗಮನ ಸೆಳೆದರು.
ಈ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡಲು ನ್ಯಾಯಾಲಯಕ್ಕೆ ಸಾಧ್ಯವೇ ಎಂದು ಎನ್.ವಿ. ಅಂಜಾರಿಯಾ, ಪ್ರಶ್ನಿಸಿದರು. ರಾಜ್ಯದಲ್ಲಿ ಸರ್ಕಾರ ಬದಲಾಗಿರುವುದರಿಂದ ಈ ನಿರ್ಧಾರಕ್ಕೆ ಮುಂದಾಗಿದೆ.
ಕೇಂದ್ರದ ಆದೇಶವನ್ನು ಪ್ರತಿ ರಾಜ್ಯವೂ ಹಂತ ಹಂತವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ವಿವರಿಸಿದರು. ವಾದ ಆಲಿಸಿದ ನ್ಯಾಯಾಲಯ, ಸರ್ಕಾರ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿ ಆ.1ಕ್ಕೆ ವಿಚಾರಣೆ ಮುಂದೂಡಿತು.