ಶಾಲೆಗಳ ಮಾನ್ಯತಾ ನವೀಕರಣ ಷರತ್ತುಗಳಿಗೆ ಆಕ್ಷೇಪ: ವಿಚಾರಣೆ ಮುಂದೂಡಿದ ಹೈಕೋರ್ಟ್

highcourt
Published on

ಬೆಂಗಳೂರು: ತೆರಿಗೆ ಪಾವತಿಯಿಂದ ವಿನಾಯಿತಿ ಇದೆ ಎಂದು ಸಾಬೀತುಪಡಿಸುವ ಶಾಲೆಗಳ ಮಾನ್ಯತಾ ನವೀಕರಣ ಅರ್ಜಿಗಳನ್ನು ಪರಿಗಣಿಸುವಂತೆ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಶಾಲೆಗಳ ಮಾನ್ಯತಾ ನವೀಕರಣಕ್ಕೆ ಷರತ್ತುಗಳನ್ನು ವಿಧಿಸಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಜು.24ರಂದು ಹೊರಡಿಸಿರುವ ಸುತ್ತೋಲೆ ರದ್ದುಪಡಿಸುವಂತೆ ಕೋರಿ ಕೃಪಾ (ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಘ) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ, ಈ ಆದೇಶ ಮಾಡಿದೆ.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ತೆರಿಗೆ ಪಾವತಿಯಿಂದ ತಮಗೆ ವಿನಾಯಿತಿ ಇದೆ ಎಂದು ಸಾಬೀತುಪಡಿಸುವ ಶಾಲೆಗಳ ಮಾನ್ಯತಾ ನವೀಕರಣ ಅರ್ಜಿಗಳನ್ನು ಪರಿಗಣಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ. ಅಲ್ಲದೆ, ಅರ್ಜಿ ಸಂಬಂಧ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಪ್ರತಿವಾದಿಗಳಾದ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿ ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.

ಶಾಲೆಗಳ ಮಾನ್ಯತಾ ನವೀಕರಣಕ್ಕೆ ಆಡಳಿತ ಮಂಡಳಿಗಳು ಪ್ರತಿ ವರ್ಷ ಅರ್ಜಿ ಸಲ್ಲಿಸಬೇಕು ಎಂಬುದು ಸೇರಿ ತೆರಿಗೆ ಪಾವತಿ, ನಿವೇಶನ ಪತ್ರ, ಖಾತಾ ಪತ್ರ ಹಾಗೂ ಕಂದಾಯ ರಶೀದಿ ಸಲ್ಲಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ‘ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್ 36ರಡಿ ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ) ನಿಯಮಗಳು-1999ರ ನಿಯಮ 3ರನ್ವಯ ಶಾಲಾ ಶಿಕ್ಷಣ ಇಲಾಖೆ ಜು.24ರಂದು ಸುತ್ತೋಲೆ ಹೊರಡಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net