

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರನ್ನಾಗಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ನೇಮಕಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ಚಿಕ್ಕಬಳ್ಳಾಪುರದ ಆರ್.ಆಂಜನೇಯ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ. ಐ ಅರುಣ್ ಅವರ ವಿಭಾಗೀಯ ಪೀಠ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಸರ್ಕಾರ, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯ್ಕೆ ಸಮಿತಿ, ಕೆಎಸ್‌ಪಿಸಿಬಿ ಸದಸ್ಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಡಿಪಿಎಆರ್ ಕಾರ್ಯದರ್ಶಿ ಜಿ ಸತ್ಯವತಿ, ಮಂಗಳೂರಿನ ಅದ್ಯಾರ್‌ನಲ್ಲಿರುವ ಸಹ್ಯಾದ್ರಿ ಇಂಜಿಯರಿಂಗ್ ಕಾಲೇಜಿನ ಸಂಶೋಧನಾ ಕನ್ಸಲ್ಟೆನ್ಸಿಯ ನಿರ್ದೇಶಕ ಡಾ. ಮಂಜಪ್ಪ, ಆಯ್ಕೆ ಸಮಿತಿ ಕಾರ್ಯದರ್ಶಿ ಅಂಜುಮ್ ಪರ್ವೇಜ್‌ಗೆ ನೋಟಿಸ್ ಜಾರಿಗೊಳಿಸಿದೆ.
ಅಲ್ಲದೇ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಗಳನ್ನು ಪ್ರಶ್ನಿಸಿರುವ ಅರ್ಜಿಯೊಂದಿಗೆ ಹಾಲಿ ಅರ್ಜಿ ಪಟ್ಟಿ ಮಾಡುವಂತೆ ನ್ಯಾಯಾಲಯವು ರಿಜಿಸ್ಟ್ರಾರ್ ಗೆ ಸೂಚಿಸಿದೆ.