ಕೆಎಸ್‌ಪಿಸಿಬಿ ಅಧ್ಯಕ್ಷರಾಗಿ ನರೇಂದ್ರ ಸ್ವಾಮಿ ನೇಮಕಕ್ಕೆ ಆಕ್ಷೇಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

highcourt
Published on

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರನ್ನಾಗಿ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೂ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ನಗರದ ಗಿರಿನಗರ ನಿವಾಸಿ ಎಂ. ಶ್ರೇಯಸ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೇರೆ ಅರ್ಜಿಗಳ ವಿಚಾರಣೆ ಆ.13ರಂದು ವಿಚಾರಣೆಗೆ ಬರಲಿವೆ. ಹಾಗಾಗಿ, ಈ ಅರ್ಜಿಯಲ್ಲಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಬೇರೆ ಅರ್ಜಿಗಳೊಂದಿಗೆ ವಿಚಾರಣೆ ನಡೆಸಬೇಕು ಎಂದು ಕೋರಿದರು.

ಇದಕ್ಕೆ ಸಮ್ಮತಿ ಸೂಚಿಸಿದ ನ್ಯಾಯಾಲಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಶಾಸಕ ಪಿ.ಎಂ ನರೇಂದ್ರ ಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿಗೆ ನೋಟಿಸ್‌ಗೊಳಿಸಿ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net