ಹಳೆಯ ತೆರಿಗೆ ಬಾಕಿ ಮನ್ನಾ; GST ನೋಂದಣಿ ಕಡ್ಡಾಯ: CM ಸಿದ್ದರಾಮಯ್ಯ ಸ್ಪಷ್ಟನೆ

untitled-design-47-6880da5042f2c
Published on

ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ GST ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ GST ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ CM ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಯುಪಿಐ ಅಡಿ 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು ಎಂದರು.

ಸಣ್ಣ ವ್ಯಾಪಾರಿಗಳ ಪರ ಸರ್ಕಾರ ಇದೆ

ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ. ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ ಎಂದರು.

ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು ಎಂದರು.

ವ್ಯಾಪಾರ ವಹಿವಾಟು ಬಂದ್​ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net