

ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ’ಗೃಹಲಕ್ಷ್ಮಿ’ ಯೋಜನೆಗೆ ಇದುವರೆಗೆ ಒಂದು ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ.
ಜುಲೈ 19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೋಂದಣಿಗೆ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಒಟ್ಟು 1.28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಓನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಮಹಿಳೆಯರು ಯಾವುದೇ ಶುಲ್ಕ ನೀಡದೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
ಆ.16 ಅಥವಾ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2000 ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.