

ಜೊಹಾನ್ಸ್ಬರ್ಗ್: ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 73 ಮಂದಿ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಆಫ್ರಿಕಾದ ಜೊಹಾನ್ಸ್ಬರ್ಗ್ನಲ್ಲಿ ನಡೆದಿದೆ.
ಘಟನೆಯಲ್ಲಿ 53ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿ ರಾಬರ್ಟ್ ಮುಲಾಡ್ಜಿ ನನ್ನ 20ವರ್ಷಗಳ ಸೇವೆಯಲ್ಲಿ ಈ ರೀತಿಯ ಅಗ್ನಿ ಅವಘಡವನ್ನು ನಾನು ಎಂದಿಗೂ ನೋಡಿರಲಿಲ್ಲ. ಬಹುಮಹಡಿ ವಸತಿ ಕಟ್ಟಡದಲ್ಲಿ ಅನೇಕರು ವಾಸಿಸುತ್ತಿದ್ದರು. ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿತ್ತು ಎಂಬ ವಿಚಾರವನ್ನು ತನಿಖೆ ಮಾಡಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕ ಎಂದು ಹೇಳಲಾಗಿದೆ. ಅಧಿಕಾರಿಗಳು ವರದಿ ಸಲ್ಲಿಸಿದ ನಂತರ ಉಳಿದ ಮಾಹಿತಿಯನ್ನು ನೀಡುತ್ತೇನೆ ಎಂದು ರಾಬರ್ಟ್ ಮುಲಾಡ್ಜಿ ತಿಳಿಸಿದ್ದಾರೆ.