

Pahalgam attack ; ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆ ಪ್ರವಾಸಿಗರಿಗೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ (5) ವಜಾಗೊಳಿಸಿದೆ.
ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ ಮತ್ತು ನ್ಯಾಯಾಂಗ ಹಸ್ತಕ್ಷೇಪವನ್ನು ಸಮರ್ಥಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪೀಠ, ಈ ಅರ್ಜಿಯು ಪ್ರಚಾರವನ್ನು ಪಡೆಯುವ ಗುರಿಯನ್ನು ಹೊಂದಿರುವಂತೆ ಕಾಣುತ್ತಿದೆ ಎಂದು ಹೇಳಿದೆ.
ಪ್ರವಾಸಿಗರ ರಕ್ಷಣೆಗಾಗಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಸಶಸ್ತ್ರ ಪಡೆಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ಕೋರಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿತ್ತು.
ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಪ್ರವಾಸಿ ಸ್ಥಳಗಳಲ್ಲಿ, ವಿಶೇಷವಾಗಿ ದೂರದ ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಬೇಕು, ಇದರಿಂದ ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ತ್ವರಿತ ವೈದ್ಯಕೀಯ ನೆರವು ಪಡೆಯಲು ಸುಲಭವಾಗುತ್ತದೆ ಎಂದು ಹೇಳಲಾಗಿತ್ತು.
(ಏಜೆನ್ಸೀಸ್)
ಏಪ್ರಿಲ್ 22 ರಂದು ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಮೇಲ್ಭಾಗದಲ್ಲಿರುವ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್‌ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದರು, ಇದರಲ್ಲಿ ಹೆಚ್ಚಿನವರು ಇತರ ರಾಜ್ಯಗಳ ಪ್ರವಾಸಿಗರೇ ಆಗಿದ್ದಾರೆ. ಈ ಘಟನೆಯು ಭಾರತ ಹಾಗೂ ಪಾಕಿಸ್ತಾನದ ಉದ್ವಿಗ್ನತೆಯನ್ನು ಹೆಚ್ಚಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು, ಹಂತಕರನ್ನು ಸೆದೆ ಬಡಿಯುವುದಾಗಿ ಹೇಳಿದ್ದಾರೆ.
ಅರ್ಜಿದಾರರು ಪ್ರಚಾರಕ್ಕಾಗಿ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುತ್ತಿರುವುದಕ್ಕೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿ ಆಕ್ಷೇಪ ವ್ಯಕ್ತಪಡಿಸಿದೆ.