

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‍ನ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ.
ಭಯೋತ್ಪಾದಕ ಸಂಘಟನೆ ದಾಳಿ ಬಗ್ಗೆ ಸಂದೇಶವನ್ನು ರವಾನಿಸಿದೆ. ಸಂದೇಶದಲ್ಲಿ ಇದು ಆರಂಭ, ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ ಮೇಲೆ ಹೆಚ್ಚಿನ ದಾಳಿ ನಡೆಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.
ಏತನ್ಮಧ್ಯೆ, ಭಾರತೀಯ ಭದ್ರತಾ ಪಡೆಗಳು ಭಾನುವಾರ ಪೂಂಚ್ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಸಂಜೆ ನಡೆದ ಉಗ್ರರ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು ಸುಮಾರು 30ರಿಂದ 40 ಸುತ್ತು ಗುಂಡು ಹಾರಿಸಿದ್ದಾರೆ. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಸ್ ಚಾಲಕನಿಗೆ ಬುಲೆಟ್ ತಗುಲಿದ್ದು, ಇದರ ಪರಿಣಾಮ ಚಾಲಕ ವಾಹನದ ಮೇಲೆ ಸಮತೋಲನ ಕಳೆದುಕೊಂಡ ಕಾರಣ ಬಸ್ ಆಳವಾದ ಕಂದಕಕ್ಕೆ ಬಿದ್ದಿದೆ. ಬಸ್‌ನ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ.