

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪಂಚಮಸಾಲಿ ಸಮುದಾಯವನ್ನು ರಾಜ್ಯ 2 ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ಶಾಸಕರ ನಿಯೋಗವು ಶುಕ್ರವಾರ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿತ್ತು.
ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದಲ್ಲಿ ಅವರೂ ಮುಖ್ಯ ವಾಹಿನಿಗೆ ಬರಲು ಅನುಕೂಲ ವಾಗುತ್ತದೆ ಎಂದು ಮುಖ್ಯಮಂತ್ರಿಗಳಿಗೆ ಸ್ವಾಮೀಜಿ ಮನವರಿಕೆ ಮಾಡಿದ್ಧಾರೆ.
ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ. ಮೀಸಲಾತಿ ವಿಚಾರವಾಗಿ ಆತುರದ ನಿರ್ಧಾರ ಸಲ್ಲದು. ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಮಾಡಬೇಕು. ಹಾಗಾಗಿ ಸಭೆ ಕರೆದು ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದ್ಧಾರೆ.
ಮುಖ್ಯಮಂತ್ರಿಗಳ ಮಾತಿಗೆ ಪ್ರತಿಕ್ರಿಯಿಸಿದ ಶಾಸಕ ವಿನಯ್ ಕುಲಕರ್ಣಿ, ಮುಸ್ಲಿಂ ಸಮುದಾಯದ ಪಾಲಿನ ಮೀಸಲಾತಿಯನ್ನು ಕಿತ್ತು ಕೊಟ್ಟಿದ್ದನ್ನು ನಾವುಗಳು ಅವತ್ತೇ ವಿರೋಧಿಸಿದ್ದೆವು ಎಂದು ಹೇಳಿದ್ಧಾರೆ.
ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.