ಎರಡು ದಾಖಲೆ ಬರೆದ ಪಂಚರತ್ನ ರಥಯಾತ್ರೆ: ನಾಡಿನ ಜನತೆ- ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ ಎಚ್​ಡಿಕೆ

hdk pancharatna yatre
Published on

ತುಮಕೂರು: ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು 'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' ಹಾಗೂ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್' ದಾಖಲೆಗೆ ಪಾತ್ರರಾಗಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ(ಗುರುವಾರ) ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಹೂಡಿದ್ದರು. ಆ ಗ್ರಾಮಕ್ಕೆ ಆಗಮಿಸಿದ 'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್' ತೀರ್ಪುಗಾರರಾದ ಆರ್.ಹರೀಶ್ ಅವರು ಎಚ್​ಡಿಕೆ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್​ಗಳನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ 'ತೀರ್ಪುಗಾರರಾದ ಮೋಹಿತ್ ಕುಮಾರ್, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೆಳೆದ ಬೆಳೆಗಳನ್ನು ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ, ಇದು ಮೊದಲ ದಾಖಲೆ ಎಂದರು.

ನಾವು ಸದಾ ದಾಖಲೆಗಳನ್ನು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಭಾರೀ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಂದಿನಿಂದಲೇ ನಾವು ಖುದ್ದು ಪರಿಶೀಲನೆ ಮಾಡಿದೆವು. ನಿನ್ನೆಯೂ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾದ ಏಕೈಕ ವ್ಯಕ್ತಿ ಕುಮಾರಸ್ವಾಮಿ ಎಂದು ಮೋಹಿತ್ ಕುಮಾರ್ ಮಾಹಿತಿ ನೀಡಿದರು.

ರೈತರಿಗೆ, ಕಾರ್ಯಕರ್ತರಿಗೆ ಸಮರ್ಪಣೆ: ಇದು ನನಗೆ ಅಚ್ಚರಿಯ ಗೌರವ. ಸಮಸ್ತ ಕನ್ನಡಿಗರ ಕೃಪೆ, ಆಶೀರ್ವಾದದಿಂದ ಪಂಚರತ್ನ ರಥಯಾತ್ರೆ ನೂತನ ಮೈಲುಗಲ್ಲು ಸ್ಥಾಪಿಸಿದೆ. ಕಳೆದ ನ.18ಕ್ಕೆ ಆರಂಭವಾದ ಈ ಯಾತ್ರೆಯಲ್ಲಿ ನಾಡಿನ ರೈತಾಪಿ ಜನ, ಅಭಿಮಾನಿಗಳು ಅಕ್ಕರೆಯಿಂದ ತಾವು ಬೆಳೆದ ಕೃಷಿಬೆಳೆಗಳಿಂದ ತಯಾರಿಸಿ ಹಾಕಿದ ನೂರಾರು ಹಾರಗಳು ಹೊಸ ದಾಖಲೆಯನ್ನೇ ನಿರ್ಮಿಸಿವೆ. ಜನರ ಈ ಪ್ರೀತಿ, ವಿಶ್ವಾಸಕ್ಕೆ ಪ್ರತಿಯಾಗಿ ನಾನು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಪಾತ್ರನಾಗಿದ್ದೇನೆ. ಇಂಥ ಎರಡು ದಾಖಲೆಗಳಿಗೆ ನಾನು ಪಾತ್ರನಾಗಲು ಜನತೆ ತೋರುತ್ತಿರುವ ಆದರಾಭಿಮಾನವೇ ಕಾರಣ. ಈ ದಾಖಲೆ ಮತ್ತು ಗೌರವವನ್ನು ನಾಡಿನ ರೈತರು, ಜೆಡಿಎಸ್​ ಪಕ್ಷದ ಕಾರ್ಯಕರ್ತರು ಹಾಗೂ ಸಮಸ್ತ ಕನ್ನಡಿಗರಿಗೆ ಅತ್ಯಂತ ವಿನಮ್ರತೆಯಿಂದ ಸಮರ್ಪಣೆ ಮಾಡುತ್ತೇನೆ ಎಂದರು.

ಪಂಚರತ್ನ ಯಾತ್ರೆ ಆರಂಭವಾಗಿ 33ನೇ ದಿನ ಪೂರೈಸಿದೆ. ಈ ಯಾತ್ರೆಯಲ್ಲಿ ಜನರು ಪ್ರೀತಿಯಿಂದ ಹಾಕಿದ ಹಾರಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಇಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಸಂತಸ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

ಪಂಚರತ್ನ ಯಾತ್ರೆ ಇದೀಗ 34ನೇ ದಿನಕ್ಕೆ ಕಾಲಿಟ್ಟಿದೆ. ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ನಿನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರ ಒಂದರಲ್ಲೇ 30ಕ್ಕೂ ಹೆಚ್ಚು ಬೃಹತ್ ಹಾರಗಳನ್ನು ಮಾಜಿ ಮುಖ್ಯಮಂತ್ರಿ ಅವರಿಗೆ ಹಾಕಿ ಗೌರವಿಸಲಾಯಿತು. ಈ ಕ್ಷೇತ್ರದಲ್ಲಿ ಸೇಬು, ಸೌತೆಕಾಯಿ, ಕೊಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಸ್ಕೂಲ್​ ಬ್ಯಾಕಿನ ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್ ಚಿಹ್ನೆ ಹಾರ, ಮಣ್ಣಿನ ಹಾರ, ಕಿರೀಟದ ಹಾರ, ಮಹಿಳೆಯರು ಹಾಕಿದ ರಾಖಿ ಹಾರ, ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್​ಇಡಿ ಹಾರ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ಹಾರಗಳನ್ನು ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತ ಕೋರಲಾಗಿತ್ತು.

'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' ಮತ್ತು 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್' ತೀರ್ಪುಗಾರರು ಎಚ್​ಡಿಕೆ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್​ಗಳನ್ನು ಹಸ್ತಾಂತರ ಮಾಡುವ ವೇಳೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆಂಜಿನಪ್ಪ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net