ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ವೈದ್ಯರಿಂದ ಚಿಕಿತ್ಸೆ

Pavithra gowda
Published on

 ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಸೇರಿದಂತೆ ಹಲವರು ಜೈಲು ಸೇರಿದ್ದಾರೆ. ಹೊರಗೆ ಐಷಾರಾಮಿ ಜೀವನ ನಡೆಸುತ್ತಿದ್ದರು ಪವಿತ್ರಾ ಗೌಡ ಹಾಗೂ ದರ್ಶನ್​ ಅವರು ಜೈಲಿನ ವಾತಾವರಣ ಹೊಂದಾಣಿಕೆ ಆಗದೆ ಜೈಲು ಸೇರಿದ್ದಾರೆ.

ಕೆಲವು ದಿನಗಳ ಹಿಂದೆ ದರ್ಶನ್​​ ಆರೋಗ್ಯದಲ್ಲಿ ಏರುಪೇರಾಗಿತ್ತು. ಜೈಲಿನಲ್ಲಿಯೇ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ ದರ್ಶನ್ ಈಗ ತುಸು ಗುಣಮುಖರಾಗಿದ್ದಾರೆ. ಅದೇ ಪ್ರಕರಣದ ಆರೋಪಿ ಪವಿತ್ರಾ ಗೌಡಗೂ ಅನಾರೋಗ್ಯ ಉಂಟಾಗಿದೆ.

ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸುವ ಮುನ್ನವೂ ಅವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದರು. ಪೊಲೀಸರು ಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡಾಗಲೂ ಸಹ ಎರಡು ಬಾರಿ ಬಿಪಿ ಲೋ ಹಾಗೂ ಇತರೆ ಸಮಸ್ಯೆಗಳಿಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಜೈಲಿನಲ್ಲಿಯೂ ಪವಿತ್ರಾಗೆ ಅನಾರೋಗ್ಯ ಮುಂದುವರೆದಿದೆ.

ದರ್ಶನ್ ರೀತಿಯಲ್ಲಿಯೇ ಪವಿತ್ರಾ ಗೌಡಗೂ ಸಹ ಜೈಲಿನ ಆಹಾರ ದೇಹಕ್ಕೆ ಸರಿಹೊಂದುತ್ತಿಲ್ಲವಂತೆ. ಹೀಗಾಗಿ ಎರಡು ದಿನಗಳ ಹಿಂದೆ ಆಸ್ಪತ್ರೆ ವಾರ್ಡ್​​ನಲ್ಲಿ ಜನರಲ್ ಚೆಕಪ್ ಮಾಡಿಸಿದ್ದಾರೆ. ಪವಿತ್ರಾ ಗೌಡ ಅವರ ಆರೋಗ್ಯ ಸುಧಾರಣೆ ಕಂಡಿದ್ದು, ಉಪಹಾರದ ಬದಲಿಗೆ ಹೆಚ್ಚಾಗಿ ಹಣ್ಣುಗಳನ್ನು ಸೇವಿಸುವಂತೆ ಸಲಹೆ ನೀಡಿದ್ದಾರಂತೆ ವೈದ್ಯರು.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಏನಿದು ಪ್ರಕರಣ?

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.
https://www.vijayavani.net/darshan-hobbies-discussion-at-social-media
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net