

ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.
ಮಾದನಾಯಕನಹಳ್ಳಿ ನಿವಾಸಿ ಶಶಿಕುಮಾರ್(೨೬) ಮೃತರು. ಭಾನುವಾರ ಮುಂಜಾನೆ ೬.೩೦ಕ್ಕೆ ನಾಗಸಂದ್ರ ಮೆಟ್ರೋ ರೈಲು ನಿಲ್ದಾಣ ಸಮೀಪದ ಪೀಣ್ಯ ಮೇಲ್ಸೇತುವೆಯಲ್ಲಿ ಈ ಘಟನೆ ನಡೆದಿದೆ.
ಚಿತ್ರದುರ್ಗ ಮೂಲದ ಶಶಿಕುಮಾರ್ ಮಾದನಾಯಕನಹಳ್ಳಿಯಲ್ಲಿ ನೆಲೆಸಿದ್ದರು. ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದರು. ಮುಂಜಾನೆ ಕೆಲಸ ನಿಮಿತ್ತ ಮಾದನಾಯಕನಹಳ್ಳಿಯಿಂದ ನಗರಕ್ಕೆ ಬರುತ್ತಿದ್ದರು. ಮಾರ್ಗ ಮಧ್ಯೆ ಪೀಣ್ಯ ಮೇಲ್ಸೇತುವೆಯಲ್ಲಿ ಬರುವಾಗ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಶಶಿಕುಮಾರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ಕರೆದೊಯ್ಯವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಚಾಲಕ ಪರಾರಿ:
ಅಪಘಾತದ ಬಳಿಕ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲಿಸಿದ್ದಾರೆ. ಅಪಘಾತ ಮಾಡಿ ಪರಾರಿಯಾಗಿರುವ ವಾಹನ ಹಾಗೂ ಅದರ ಚಾಲಕನ ಪತ್ತೆಗಾಗಿ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮರಾಗಳ ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.