ಡಾ.ಪ್ರಭಾ, ಶ್ರೇಯಸ್ ಆಯ್ಕೆ ಪ್ರಶ್ನಿಸಿ ಅರ್ಜಿ: ಹೈಕೋರ್ಟ್‌ನಲ್ಲಿ ಇನ್ನಷ್ಟೇ ವಿಚಾರಣೆ

highcourt
Published on

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಚುನಾಯಿತರಾದ ಕಾಂಗ್ರೆಸ್‌ನ ಶ್ರೇಯಸ್ ಎಂ.ಪಟೇಲ್ ಮತ್ತು ದಾವಣೆಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯ ಸಿಂಧುತ್ವವನ್ನು ಪ್ರಶ್ನಿಸಿ ಗುರುವಾರ ಹೈಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಲಾಗಿದ್ದು, ಅರ್ಜಿಯ ವಿಚಾರಣೆ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.


ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅವರು ಶ್ರೇಯಸ್ ಪಟೇಲ್ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲವೆಂದು ಘೋಷಿಸುವಂತೆ ಕೋರಿದ್ದಾರೆ.


ಅಲ್ಲದೆ, ಸಂಸದ ಶ್ರೇಯಸ್ ಎಂ.ಪಟೇಲ್ ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ ಮತ್ತು ಆ ಕುರಿತು ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ ಎಂದು ದೂರಿದ್ದಾರೆ.


ಜತೆಗೆ ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಗಿಂತ ಹೆಚ್ಚಿನ ಹಣವನ್ನು ಖರ್ಚು ಮಾಡಿದ್ದಾರೆ. ಆ ಕುರಿತು ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನೇ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.


ಇದೇ ವೇಳೆ ದಾವಣಗೆರೆ ಸಂಸದರಾಗಿ ಡಾ. ಪ್ರಭಾ ಮಲ್ಲಿಕಾರ್ಜುನ ಆಯ್ಕೆ ಅಸಿಂಧು ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ ತಕರಾರು ಅರ್ಜಿ ಹೂಡಿದ್ದಾರೆ.


ಪ್ರತಿವಾದಿ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿರುವುದೇ ಅಲ್ಲದೆ, ಮಹಿಳೆಯರಿಗೆ 1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾದುದು. ಮತದಾರರಿಗೆ ಲಂಚದ ಆಮಿಷ ಒಡ್ಡಿದ್ದಾರೆ ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿ ಅವರು ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುವೆಂದು ಘೋಷಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net