

ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯ ಎಡಪ್ಪಾಡಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳು ಮಂಗಳವಾರ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಕ್ಷಣ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವೇಳೆ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ರಾಮಚಂದ್ರನ್ ಇನ್ಸ್‌ಪೆಕ್ಟರ್ ಬೇಬಿ ಅವರಿಗೆ ಘಟನೆಯನ್ನು ತಿಳಿಸಿದರು. ನಂತರ, ಮಾಹಿತಿ ಮೇರೆಗೆ ಸೇಲಂ ಪೊಲೀಸ್ ವರಿಷ್ಠಾಧಿಕಾರಿ ಎ.ಕೆ.ಅರುಣ್ ಕಬಿಲನ್ ಮತ್ತು ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಧಾವಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಚೆನ್ನೈನ ರಾಜಭವನ ಮುಖ್ಯ ದ್ವಾರಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನ ನಿಜವಾದ ಕಾನೂನು ಸುವ್ಯವಸ್ಥೆಯನ್ನು ಈ ಘಟನೆಯು ಬಿಂಬಿಸುತ್ತಿದೆ ಎಂದು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ. ಅಣ್ಣಮಲೈ ತಿಳಿಸಿದ್ದಾರೆ.