

ಬೆಂಗಳೂರು: ಲಭ್ಯವಿರುವ ಸೀಟುಗಳಿಗಿಂತ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಕಾರಣ ಎಂ.ಇ/ಎಂ.ಟೆಕ್‌ನ ಈ ಕೆಳಗಿನ ಐದು ಕೋರ್ಸ್‌ಗಳಿಗೆ ಪಿಜಿಸಿಇಟಿ-25 ನಡೆಸದಿರಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಬಯೊ- ಟೆಕ್ನಾಲಜಿ, ಕೆಮಿಕಲ್ ಇಂಜಿನಿಯರಿಂಗ್, ಎನ್ವಿರಾನ್ಮೆಂಟ್ ಇಂಜಿನಿಯರಿಂಗ್, ಪಾಲಿಮರ್ ಸೈನ್ಸ್ ಮತ್ತು ಟೆಕ್ಸ್‌ಟೈಲ್ ಟೆಕ್ನಾಲಜಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗೆ ಲಭ್ಯವಿರುವ ಸೀಟುಗಳಿಗಿಂತ ಕಡಿಮೆ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಅರ್ಹದಾಯಕ ಪದವಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, ಪ್ರಕಟಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಈ ಮೇಲಿನ ಕೋರ್ಸ್‌ಗಳನ್ನು ಹೊರತುಪಡಿಸಿ, ಸಿವಿಲ್ ಇಂಜಿನಿಯರಿಂಗ್, ಮೆಕಾನಿಕಲ್ ಸೈನ್ಸ್ ಮತ್ತು ಎಲೆಕ್ಟ್ರಿಕಲ್ ಸೈನ್ಸ್ ವಿಷಯಗಳಿಗೆ ಇದೇ 31ರಂದು ವೇಳಾಪಟ್ಟಿ ಪ್ರಕಾರ ಪರೀಕ್ಷೆ ನಡೆಯಲಿದೆ. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಜೂ.2ರಂದು ನಡೆಸಲಾಗುವುದು ಎಂದು ತಿಳಿಸಿದ್ದಾರೆ.