ನಿಷೇಧಿತ ಪ್ಲಾಸ್ಟಿಕ್ ವಶ

19 SARAG 2 Plastic
Published on

ಸರಗೂರು : ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಶುಕ್ರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಉದ್ಯಮಿಗಳಿಗೆ ದಂಡ ವಿಧಿಸಿದೆ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ವಿವಿಧ ಅಂಗಡಿಗಳ ಮೇಲೆ ಏಕಾಏಕಿ ದಾಳಿ ನಡೆಸಿ ಅಂಗಡಿ ಮುಂಗಟ್ಟುಗಳಲ್ಲಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆಯಲಾಯಿತು. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಊಟದ ತಟ್ಟೆ, ಪ್ಲಾಸ್ಟಿಕ್ ಹಾಳೆ, ಪ್ಲಾಸ್ಟಿಕ್ ಲೋಟ ಇನ್ನಿತರ ನಿಷೇಧಿತ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ವಿವಿಧ ಉದ್ಯಮಿಗಳಿಂದ ದಂಡ ರೂಪವಾಗಿ 6,000 ರೂ. ಸಂಗ್ರಹಿಸಲಾಗಿದೆ. ರಸ್ತೆ ಬದಿಯ ವ್ಯಾಪಾರಿಗಳು, ಹಣ್ಣು ತರಕಾರಿ ಮಾರಾಟಗಾರರು ಸೇರಿದಂತೆ ವರ್ತಕರು ಯಾವುದೇ ಕಾರಣಕ್ಕೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಬಾರದೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರದ ಆದೇಶದಂತೆ ಪ್ರತಿಯೊಬ್ಬರೂ ಬಟ್ಟೆ ಚೀಲಗಳನ್ನು ಉಪಯೋಗಿಸುವಂತೆ ಅವರು ಸಲಹೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾ ರಾಮು, ಸದಸ್ಯರು ನೂರಳಾಸ್ವಾಮಿ, ಮುಖಂಡರಾದ ಶ್ರೀನಾಥ್, ರಾಮಚಂದ್ರ,ಕಂದಾಯ ಅಧಿಕಾರಿ ರಾಮು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net