

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಇಟ್ಟಿದೆ.
ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ಸರ್ಕಾರವೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವುದು ಸಂಪ್ರದಾಯ.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2022ರ ಜ.1ರಿಂದ ಪೂರ್ವಾನ್ವಯವಾಗಿ ತನ್ನ ನೌಕರರಿಗೆ ಶೇ.3 ತುಟ್ಟಿಭತ್ಯೆ ಮಂಜೂರು ಮಾಡಿ ಉಲ್ಲೇಖಿತ ಆದೇಶವನ್ನು ಹೊರಡಿಸಿದೆ.
ಆದ್ದರಿಂದ ಪ್ರಸ್ತುತ ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಈ ವರ್ಷದ ಜ. 1ರಿಂದ ಪೂರ್ವಾನ್ವಯ ಆಗುವಂತೆ ಶೇ. 3 ತುಟ್ಟಿಭತ್ಯೆ ಬಿಡುಗಡೆಗೊಳಿಸಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪತ್ರಮುಖೇನ ಮನವಿ ಮಾಡಿಕೊಂಡಿದ್ದಾರೆ.