

ನವದೆಹಲಿ: ಇಂದಿನಿಂದ ಒಂಬತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚಾರ ಆರಂಭಿಸುತ್ತಿದ್ದು, ಇವು ಸಂಚಾರ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಿಸುತ್ತವೆ ಮತ್ತು ಭಾರತದಾದ್ಯಂತ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು.
ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್‌ನಂತಹ 11 ರಾಜ್ಯಗಳಲ್ಲಿ ಸಂಚಾರ ಸಂಪರ್ಕ ಸುಧಾರಣೆಗೆ ನೆರವಾಗಲು ಒಂಬತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆ.24) ವರ್ಚುವಲ್ ಆಗಿ ಏಕಕಾಲದಲ್ಲಿ ಚಾಲನೆ ನೀಡಿದರು. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ಹಲವಾರು ರೈಲು ನಿಲ್ದಾಣಗಳಿವೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಈ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ಕೆಲಸಗಳು ನಡೆಯುತ್ತಿವೆ. ಆಜಾದಿ ಕಾ ಅಮೃತ್ ಕಾಲದಲ್ಲಿ ಅಭಿವೃದ್ಧಿಪಡಿಸುವ ಎಲ್ಲ ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಎಂದು ಕರೆಯಲಾಗುವುದು ಎಂದು ತಿಳಿಸಿದರು.
ದೇಶದಲ್ಲಿ 25 ವಂದೇ ಭಾರತ್ ರೈಲುಗಳು ಈಗಾಗಲೇ ಸಂಚರಿಸುತ್ತಿವೆ. ಈಗ ಅವುಗಳಿಗೆ ಇನ್ನೂ ಒಂಬತ್ತು ರೈಲುಗಳನ್ನು ಸೇರಿಸಲಾಗಿದೆ. ವಂದೇ ಭಾರತ್ ರೈಲುಗಳ ಜನಪ್ರಿಯತೆ ನಿರಂತರವಾಗಿ ಹೆಚ್ಚುತ್ತಿದೆ. 1,11,00,000 ಕ್ಕೂ ಹೆಚ್ಚು ಪ್ರಯಾಣಿಕರು ಈಗಾಗಲೇ ಈ ರೈಲುಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಇಂದು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್‌ನ ಜನರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸೌಲಭ್ಯವನ್ನು ಪಡೆಯುತ್ತಾರೆ. ಈ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ದೇಶದ ಹೊಸ ಶಕ್ತಿಯನ್ನು ಬಿಂಬಿಸುತ್ತವೆ ಎಂದು ಪ್ರಧಾನಿ ಮೋದಿ ತಿಳಿಸಿದರು. (ಏಜೆನ್ಸೀಸ್)
9 ರೈಲುಗಳು ಮಾರ್ಗ, ಸಮಯ ಮುಂತಾದ ಸಮಗ್ರ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ