ಪೊಲೀಸ್ ಬಿಗಿ ಬಂದೋಬಸ್ತ್

POLICE
Published on

ಬೆಂಗಳೂರು: ಮುಡಾ ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ತನಿಖೆಗೆ ಮಂಗಳವಾರ ಹೈಕೋರ್ಟ್ ಹಸಿರು ನಿಶಾನೆ ತೋರಿದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ, ಗೃಹ ಕಚೇರಿ ಕೃಷ್ಣಾ, ರಾಜಭವನ, ವಿಧಾನಸೌಧ, ವಿಕಾಸಸೌಧ, ಎಂ.ಎಸ್.ಬಿಲ್ಡಿಂಗ್, ಕೆಪಿಸಿಸಿ ಕಚೇರಿ, ಕಾಂಗ್ರೆಸ್ ಭವನ, ಬಿಜೆಪಿ ಕಚೇರಿ, ಜೆಡಿಎಸ್ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು, ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಿದ್ಧರಾಮಯ್ಯ ಅಭಿಮಾನಿಗಳು ಪ್ರತಿಭಟನೆ, ಧರಣಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚಾರಿಕಾ ಕ್ರಮವಾಗಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಅಂತೆಯೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಭದ್ರತೆ ಹೆಚ್ಚಿಸಲು ಆಯಾಯ ಜಿಲ್ಲಾ ಎಸ್ಪಿಗಳು, ನಗರ ಪೊಲೀಸ್ ಆಯುಕ್ತರುಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸೂಚಿಸಿದ್ದಾರೆ. ಅದರಂತೆ ಮಂಗಳವಾರ ಮಧ್ಯಾಹ್ನದಿಂದಲೇ ರಾಜ್ಯ ಪೊಲೀಸರು ಅಲರ್ಟ್ ಆಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಭದ್ರತೆಗೆ ಸ್ಥಳೀಯ ಪೊಲೀಸರ ಜತೆಗೆ ಸಿಎಆರ್, ಡಿಎಆರ್, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net