

ಬೆಂಗಳೂರು: ಸಮುದಾಯ ಆಧಾರಿತ ಕೆರೆ ಬಳಕೆದಾರರ ಸಂಘಗಳಿಗೆ ಕೆರೆಗಳ ಸಂರಕ್ಷಣೆ ಹಾಗೂ ನಿರ್ವಹಣೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸುವುದಾಗಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ಭರವಸೆ ನೀಡಿದರು.
ವಿಕಾಸಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಕರ್ನಾಟಕ ಕೆರೆ ಬಳಕೆದಾರರ ಸಂಘಗಳ ರಾಜ್ಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಮತ್ತು ಕೆರೆ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಇಲಾಖೆಗಳ ಮಧ್ಯೆ ಹಂಚಿಹೋಗಿರುವ ಕೆರೆಗಳನ್ನು ಆಯಾ ಸ್ಥಳೀಯ ಕೆರೆ ಸಂಘಗಳ ವ್ಯಾಪ್ತಿಗೆ ತರಬೇಕಾಗಿದೆ. ಈ ಹಿಂದೆ ಇದ್ದಂತಹ ಕೆರೆ ಸಂಘಗಳ ಆರ್ಥಿಕ ಸಬಲೀಕರಣ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೆರೆ ಬಳಕೆದಾರರ ಸಂಘಗಳ ರಾಜ್ಯ ಒಕ್ಕೂಟದ ಪದಾಧಿಕಾರಿಗಳು ಸಲಹೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, ರಾಜ್ಯದ ಕರೆಗಳ ಸಂರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರವನ್ನು ರಚಿಸಲಾಗಿದೆ. ಈ ಪ್ರಾಧಿಕಾರದ ಮೂಲಕ ಇನ್ನಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಆಯವ್ಯಯದಲ್ಲಿ ಕೆರೆಗಳ ಸುತ್ತ ಜೀವ ಪರಿಸರವನ್ನು ಉಳಿಸಿಕೊಂಡು ಅವುಗಳ ಪುನರುಜ್ಜೀವನಗೊಳಿಸುವುದಕ್ಕಾಗಿ ಕೆರೆ ಬಳಕೆದಾರರ ಸಂಘಗಳ ಬಲವರ್ಧನೆಗೆ ಕ್ರಮಕೈಗೊಳ್ಳುವಂತೆ ಹಾಗೂ ಜಲಬಳಕೆ ಮಾಡಲು ಅರ್ಥಪೂರ್ಣ ಕ್ರಿಯಾಯೋಜನೆ ಸಿದ್ದಪಡಿಸುವಂತೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಯೋಜನೆಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ಕರ್ನಾಟಕ ಕೆರೆ ಬಳಕೆದಾರರ ಸಂಘಗಳ ರಾಜ್ಯ ಒಕ್ಕೂಟ ನೀಡಿದ ಸಲಹೆಗಳನ್ನು ಈ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.
ಚಿತ್ರದುರ್ಗದ ಮಾಜಿ ಸಂಸದರಾದ ಚಂದ್ರಪ್ಪನವರು ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.