ಪಿಒಪಿ ಗಣಪತಿ ತಯಾರಿಕೆ, ಮಾರಾಟ ತಡೆಯಲು ಜಿಲ್ಲಾಧಿಕಾರಿ ಆದೇಶ

1PGEB_j5_400x400
Published on

ರಾಣೆಬೆನ್ನೂರ: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವುದು ಹಾಗೂ ಮಾರಾಟ ಮಾಡುವುದನ್ನು ಕೂಡಲೇ ತಡೆಯಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಬುಧವಾರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ಆದೇಶ ಹೊರಡಿಸಿದ್ದಾರೆ.
ನಗರ ಸೇರಿ ಜಿಲ್ಲಾಧ್ಯಂತ ಪಿಒಪಿ ಗಣಪತಿ ತಯಾರಿಕೆ ಕುರಿತು ವಿಜಯವಾಣಿ ಪತ್ರಿಕೆ ಆ. 21ರಂದು ತೆರೆಮರೆಯಲ್ಲಿ ಪಿಒಪಿ ಮೂರ್ತಿ ತಯಾರಿಕೆ..? ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದರ ಎಚ್ಚೆತ್ತುಕೊಂಡು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಪಿಒಪಿ ಗಣಪತಿ ತಯಾರಿಕೆ, ಮಾರಾಟ ಮಾಡುವ ವ್ಯಕ್ತಿ ಮತ್ತು ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ರಾಜ್ಯ ಮಾಲಿನ್ಯ ಮಂಡಳಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಗಣಪತಿ ವಿಗ್ರಹಗಳ ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಮಳಿಗೆಗಳನ್ನು ಪರಿವೀಕ್ಷಿಸಿದಾಗ, ನಿಷೇಧಿತ ಪದಾರ್ಥ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ವಿಗ್ರಹಗಳನ್ನು ತಯಾರಿಸುತ್ತಿರುವುದು ಹಾಗೂ ಬಣ್ಣಲೇಪಿತವಾದ ವಿಗ್ರಹಗಳನ್ನು ಮಾರಾಟಕ್ಕೆ ಇಟ್ಟಿರುವುದು ಕಂಡುಬಂದಿದೆ.
ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿದ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರಂತೆ ಕೆರೆಗಳಿಗೆ ಇತರ ಜಲಮೂಲಗಳಲ್ಲಿ ವಿಗ್ರಹಗಳ ವಿಸರ್ಜನೆಯಿಂದಾಗುವ ಮಾಲಿನ್ಯ ನಿಯಂತ್ರಿಸುವ ಹಿನ್ನಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲು ಆದೇಶಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net