ಅಧಿಕಾರ ಹಂಚಿಕೆ ವಿಚಾರ: ಸಿಎಂ ಸಿದ್ದರಾಮಯ್ಯ ಅವರ ಮಾತೇ ಅಂತಿಮ: DK ಶಿವಕುಮಾರ್

Untitled design - 2025-10-02T135709.914
Published on

ಬೆಂಗಳೂರು :ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಡಿಸಿಎಂ DK ಶಿವಕುಮಾರ್ ಸ್ಪಷ್ಟ ಸಂದೇಶ ರವಾನಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್, “ಯಾವ ಅಧಿಕಾರ ಹಂಚಿಕೆ ವಿಚಾರ ಇಲ್ಲ. ಈ ಬಗ್ಗೆ ಯಾರಿಗೂ ಮಾತನಾಡುವ ಹಕ್ಕಿಲ್ಲ. ಶಾಸಕ ರಂಗನಾಥ್ ಸೇರಿದಂತೆ ಈ ವಿಚಾರವಾಗಿ ಯಾರೆಲ್ಲಾ ಮಾತನಾಡಿದ್ದಾರೋ ಅವರಿಗೆ ನೋಟೀಸ್ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಅವರಿಗೆ ಸೂಚಿಸಿದ್ದೇನೆ ಎಂದರು.

ಸಿಎಂ ಹೇಳಿದ್ದೆ ಅಂತಿಮ

ಈ ವಿಚಾರವಾಗಿ ಚರ್ಚೆ ಮಾಡಬಾರದು ಎಂದು ಸ್ವತಃ ನಾನೇ ಹೇಳುತ್ತಿದ್ದೇನೆ. ನಿನ್ನೆ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದರೂ ಕೆಲವು ಮಾಧ್ಯಮಗಳು ಬೇರೆ ರೀತಿ ಬರೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೇಳಿರುವ ಮಾತು ಅಂತಿಮ. ಅದರೆ ಮೇಲೆ ಈ ವಿಚಾರವಾಗಿ ಯಾರೂ ಚರ್ಚೆ ಮಾಡುವಂತಿಲ್ಲ ಎಂದರು.

ಯಾರು ಈ ವಿಚಾರವಾಗಿ ಚರ್ಚೆ ಮಾಡುತ್ತಾರೋ ಅವರು ಪಕ್ಷಕ್ಕೆ ಡ್ಯಾಮೇಜ್ ಮಾಡಿದಂತೆ. ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ, ನನ್ನ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಕಿಡಿಕಾರಿದರು.

“ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡಿರುವ ಶಿವರಾಮೇಗೌಡ, ಶಾಸಕ ರಂಗನಾಥ್ ಅವರಿಗೂ ನೋಟೀಸ್ ನೀಡುವಂತೆ ನಿರ್ದೇಶನ ನೀಡಿದ್ದೇನೆ. ಈ ವಿಚಾರದಲ್ಲಿ ಮಾತನಾಡಿದರೆ ಜಿ.ಸಿ ಚಂದ್ರಶೇಖರ್ ಅವರಿಗೂ ನೋಟೀಸ್ ನೀಡುವಂತೆ ಹೇಳಿದ್ದೇನೆ. ನಮ್ಮಲ್ಲಿ ಶಿಸ್ತು ಇಲ್ಲವಾದರೆ ಪಕ್ಷ ಉಳಿಯುವುದಿಲ್ಲ” ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಫಿಕ್ಸ್ ಆಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಪಕ್ಷದವರು ಅವರ ಪಕ್ಷದಲ್ಲಿನ ಕ್ರಾಂತಿ ಬಗ್ಗೆ ಚರ್ಚೆ ಮಾಡಿಕೊಳ್ಳಲಿ. ಅವರ ಆಂತರಿಕ ಸಮಸ್ಯೆ ಚರ್ಚೆ ಮಾಡಿ ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರಿಗೆ ಅಗತ್ಯ ಸೂಜಿದಾರವನ್ನು ನಾನು ಕಳುಹಿಸಿಕೊಡುತ್ತೇನೆ. ಅವರು ತಮ್ಮ ಪಕ್ಷದ ಹರುಕುಗಳನ್ನು ಹೊಲಿದುಕೊಳ್ಳಲಿ” ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net