

ಮೈಸೂರು: ಪ್ರಜಾತಂತ್ರ ವ್ಯವಸ್ಥೆ ಉಳಿಸಿ ಸರ್ವಾಧಿಕಾರಿ ದಬ್ಬಾಳಿಕೆ ನಿಲ್ಲಿಸುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ಹಾರ್ಡಿಂಜ್ ವೃತ್ತದ ಬಳಿ ಬುಧವಾರ ಸತ್ಯಾಗ್ರಹ ನಡೆಸಿದರು.
ಸತ್ಯಾಗ್ರಹಕ್ಕೂ ಮುನ್ನ ಗಾಂಧಿ ಜಯಂತಿ ಅಂಗವಾಗಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ಖಂಡನೀಯ. ರಾಜಭವನ ರಾಜಕೀಯ ಭವನ ಆಗಬಾರದು. ರಾಜಭವನದ ಹೆಸರು ಬದಲಾವಣೆ ಮಾಡಿ ಪ್ರಜಾಭವನ ಎಂದು ಕರೆಯಬೇಕು ಎಂದು ಒತ್ತಾಯಿಸಿದರು.
ರಾಜ್ಯಪಾಲರ ಪ್ರಜಾ ವಿರೋಧಿ ನೀತಿ ಬದಲಾಗಬೇಕು. ಕೇಂದ್ರದ ಅಧೀನದಲ್ಲಿರುವ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು. ನರೇಂದ್ರ ಮೋದಿ ಸರ್ಕಾರ ಬಂದ ನಂತರ ಮುಖ್ಯಮಂತ್ರಿಗಳನ್ನು ಜೈಲಿನಲ್ಲಿಡುವ ಸಂಸ್ಕೃತಿ ಆರಂಭವಾಗಿದೆ. ಅನೇಕ ರಾಜ್ಯಗಳಲ್ಲಿ ರಾಜ್ಯಪಾಲರ ದಬ್ಬಾಳಿಕೆ ನಡೆಯುತ್ತಿದೆ. ಹೀಗಾಗಿ ಪ್ರಜಾತಂತ್ರ ವ್ಯವಸ್ಥೆ ಉಳಿಸಿ ಸರ್ವಾಧಿಕಾರಿ ದಬ್ಬಾಳಿಕೆ ನಿಲ್ಲಿಸುವಂತೆ ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಈ ವಿಚಾರದಲ್ಲಿ ರಾಜ್ಯಪಾಲರ ವಿರುದ್ಧ ಹೋರಾಟ ನಡೆಸುತ್ತೇನೆ ಎಂದ ಅವರು, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮುಡಾಗೆ ನಿವೇಶನ ಹಿಂದಿರುಗಿಸುವ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ ಎಂದರು.