ಪ್ರಜ್ವಲ್ ರೇವಣ್ಣ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

Published on

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಆ ಅರ್ಜಿಗಳ ವಿಚಾರಣೆಯನ್ನು ಮುಂದೂಡಿತು.

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಗುರುವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ವಿಶೇಷ ತನಿಖಾ ದಳದ (ಎಸ್‌ಐಟಿ) ವಿಶೇಷ ಸರ್ಕಾರಿ ಅಭಿಯೋಜಕರಾದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ನ್ಯಾಯಾಲಯ ಪುರಸ್ಕರಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net