

ಬೆಂಗಳೂರು: ಎಂ.ಪಿ ಸ್ಥಾನದಿಂದ ಅಸಿಂಧು ಗೊಳಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಬೇಕಾಗಿದ್ದು, ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿರುವ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇ ಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನೇತೃತ್ವದ ಪೀಠ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿತ್ತು.