ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು; ಕೇಂದ್ರ ಸರ್ಕಾರ ಸ್ಪಂದಿಸಿಲ್ಲ

Parameswar Crime11
Published on

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿರುವ ಕುರಿತು ನಾನು ಮತ್ತು ಮುಖ್ಯಮಂತ್ರಿ ಅಂಕಿ-ಅಂಶವನ್ನು ಪ್ರಕಟಿಸಿದ್ದೇವೆ. ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುದಕ್ಕೆ ಅಂಕಿ-ಅಂಶಗಳಿವೆ. ಅದಕ್ಕೆ ಬಿಜೆಪಿಯವರು ಮೊದಲು ಉತ್ತರ ನೀಡಲಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸವಾಲು ಹಾಕಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿಯವರ ಆರೋಪದ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವಧಿಯಲ್ಲಿ ಎಷ್ಟು ಕೊಲೆ ನಡೆದಿದ್ದವು. ನಮ್ಮ ಅವಧಿಯಲ್ಲಿ ಎಷ್ಟು ನಡೆದಿವೆ ನೊಡಲಿ ಎಂದು ಟಾಂಗ್ ಕೊಟ್ಟರು.

ಕೇಂದ್ರ ಸಹಕಾರ ನೀಡುತ್ತಿಲ್ಲ

ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿ, ಎಸ್‌ಐಟಿ ಪತ್ರ ಬರೆದಿದ್ದಾರೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ನಂತರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಎಸ್‌ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ ಎಂದು ಆರೋಪಿಸಿದರು.

ಗುಣಮಟ್ಟಕ್ಕೆ ಮೆರಿಟ್ ಮೆಂಟೇನ್ ಮಾಡಿ

ಖಾಸಗಿ ವಲಯದಲ್ಲಿ ಮೀಸಲಾತಿ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಹೊರಗುತ್ತಿಗೆ ಹುದ್ದೆಗಳಿಗೆ ಮೀಸಲಾತಿ ನೀಡಲಾಗುತ್ತಿದೆ. ನೇಮಕ ಮಾಡಿಕೊಳ್ಳುವಾಗ ಮೆರಿಟ್‌ನಲ್ಲಿ ಹೊಂದಾಣಿಕೆಯಾಗುವುದು ಬೇಡ. ದಲಿತ ಸಮುದಾಯದ ಪದವೀದರರು ಮೆರಿಟ್‌ನಲ್ಲಿ ಬರುತ್ತಿದ್ದಾರೆ. ಮೆರಿಟ್ ಮೇಂಟೇನ್ ಮಾಡಿ, ಗುಣಮಟ್ಟ ಹಾಳಾಗಲ್ಲ ಎಂದು ತಿಳಿಸಿದರು.

ತಾ.ಪಂ,ಜಿಪಂ. ಚುನಾವಣೆ ನಡೆಯಬೇಕು

ಸ್ಥಳೀಯ ಸಂಸ್ಥೆಯ ಚುನಾವಣೆ ನೆನೆಗುದಿಗೆ ಬಿದ್ದಿವೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್‌ನ ಆದೇಶ ಯಾವಾಗ ಬೇಕಾದರು ಬರಬಹುದು. ಇದನ್ನು ಗಮನದಲ್ಲಿಡ್ಡುಕೊಂಡು ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿರಬಹುದು ಎಂದು ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಜನಪ್ರಿತಿನಿಧಿಗಳು ಇಲ್ಲ. ಸರಿಯಾದ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.

ಹೈಕಮಾಂಡ್‌ಗೆ ಬಿಟ್ಟದ್ದು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತ ಪ್ರಶ್ನೆಗೆ, ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆ ಆಗಿಲ್ಲ. ಅದು ಹೈಕಮಾಂಡ್‌ಗೆ ಬಿಟ್ಟಿರುವ ವಿಚಾರ. ಅಧ್ಯಕ್ಷರನ್ನು ಬದಲಾಯಿಸಬೇಕು ಅನ್ನಿಸಿದರೆ ಬದಲಾಯಿಸುತ್ತಾರೆ. ಇಲ್ಲವಾದರೆ ಇಲ್ಲ ಎಂದು ಡಾ.ಪರಮೇಶ್ವರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net