ಪ್ರಜ್ವಲ್ ರೇವಣ್ಣ ಕಸ್ಟಡಿ ಅವಧಿ ಜೂನ್ 10 ರವರೆಗೆ ವಿಸ್ತರಣೆ

prajwal
Published on

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪದಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್ 10ರವರೆಗೆ ವಿಸ್ತರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಈ ಮೊದಲು ನೀಡಿದ್ದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ ಆರೋಪಿ ಪ್ರಜ್ವಲ್ನನ್ನು ಗುರುವಾರ ಮಧ್ಯಾಹ್ನ ೩ ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ಕೆ.ಎನ್ ಶಿವಕುಮಾರ್ ಪುರಸ್ಕರಿಸಿದರು.
ಆರೋಪಿ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಹಾಜರಿದ್ದರು. ಮೇ ೩೧ರಂದು ತಡರಾತ್ರಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಪ್ರಜ್ವಲ್‌ರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಅಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಜೂನ್ ೬ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದಿದ್ದರು. ಪ್ರಜ್ವಲ್ ವಿರುದ್ಧ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಅವುಗಳ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ.

ಸದ್ಯದಲ್ಲಿಯೇ ಸ್ಥಳ ಮಹಜರು:
ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ಅಥವಾ ಶನಿವಾರ ಹಾಸನ ಮತ್ತು ಬಸವನಗುಡಿಯ ನಿವಾಸಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದಾರೆ.
ಅಧಿಕಾರಿಗಳಿಂದ ಮಾಹಿತಿ ಸಂಗ್ರಹ:
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಾಸನದಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಐದು ವರ್ಷಗಳಲ್ಲಿ ಹಾಸನದಲ್ಲಿ ಕೆಲಸ ಮಾಡಿದ್ದ ಹಿರಿಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು, ಎಸ್‌ಪಿ ಆಗಿ ಮತ್ತು ಅಡಿಶನಲ್ ಎಸ್‌ಪಿ ಹುದ್ದೆಯಲ್ಲಿ ಕೆಲಸ ಮಾಡಿದ್ದವರಿಂದ ಮಾಹಿತಿ ಪಡೆಯಲಾಗುತ್ತಿದೆ. ಈ ವಿಚಾರವಾಗಿ ಹಿಂದೆ ಯಾವುದಾದರು ವಿಡಿಯೋಗಳು ಹರಿದಾಡಿತ್ತಾ? ಯಾರಾದರೂ ಮಾಹಿತಿ ನೀಡಿದ್ದರಾ? ಎಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿಡಿಯೋಗಳು ನಾಲ್ಕೈದು ವರ್ಷಗಳ ಹಿಂದಿನವು ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಎಸ್‌ಐಟಿ ಮುಂದಾಗಿದೆ ಎಂದು ತಿಳಿದು ಬಂದಿದೆ.


ಭವಾನಿ ರೇವಣ್ಣಗೆ ಬಂಧನ ವಾರಂಟ್
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇಲೆ ಭವಾನಿ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಕೋರ್ಟ್ ವಾರಂಟ್ ಜಾರಿ ಮಾಡಿದೆ. ವಿಚಾರಣೆಗೆ ಆಗಮಿಸುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಭವಾನಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ವಜಾಗೊಂಡಿತ್ತು. ಎಸ್‌ಐಟಿ ವಿಚಾರಣೆಗೆ ಹಾಜರಾಗದ ಬೆನ್ನಲ್ಲೇ ಭವಾನಿ ರೇವಣ್ಣ ವಿರುದ್ಧ ೪೨ನೇ ಎಸಿಎಂಎಂ ಕೋರ್ಟ್ ಬಂಧನ ವಾರಂಟ್ ಹೊರಡಿಸಿದೆ. ಇತ್ತೀಚೆಗೆ ಭವಾನಿ ರೇವಣ್ಣ ಅವರನ್ನು ವಶಕ್ಕೆ ಪಡೆಯಲು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಸತತ ೭ ಗಂಟೆ ಕಾದು ವಾಪಸ್ ಆಗಿದ್ದರು. ವಿಚಾರಣೆಗೆ ಆಗಮಿಸುವುದಾಗಿ ಹೇಳಿದ್ದ ಭವಾನಿ ರೇವಣ್ಣ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ವರದಿ ಮಾಡಿಕೊಂಡು ವಾಪಸ್ ತೆರಳಿದ್ದರು. ಇದೀಗ ಭವಾನಿ ರೇವಣ್ಣ ಬಂಧನಕ್ಕೆ ವಾರಂಟ್ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net