

Petition: ಬೂಕರ್ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರು ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್(ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಇದೀಗ ಸೋಮವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಆದ್ದರಿಂದ ಅರ್ಜಿ ವಜಾಗೊಳಿಸಲಾಗಿದೆ ಎಂದು ಪೀಠ ಹೇಳಿದೆ.
ಮಾಜಿ ಸಂಸದ ಪ್ರತಾಪ್ ಸಿಂಹ ಮಾತ್ರವಲ್ಲದೆ ಟಿ. ಗಿರೀಶ್, ಎಚ್.ಎಸ್.ಗೌರವ್ ಎಂಬವರೂ ಸಲ್ಲಿಸಿದ್ದ ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿದೆ.
ಭಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದು ಸರಿಯಲ್ಲ. ಕನ್ನಡಾಂಬೆ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ವಿವಾದ ಕಾರಣವಾಗಿದೆ. ಅಲ್ಲದೆ, ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿ ಪರ ವಕೀಲ ಸುದರ್ಶನ್ ವಾದ ಮಂಡಿಸಿದರು.
ಇದಕ್ಕೆ ಕೋರ್ಟ್ ಪ್ರತಿಯಾಗಿ, ಈ ದೇಶದಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳುವುದು ತಪ್ಪಲ್ಲ. ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಎಂದು ಪೀಠ ಪ್ರಶ್ನಿಸಿತು. ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ ಎಂದು ಪೀಠ ಅರ್ಜಿ ತಿರಸ್ಕರಿಸಿತು.