ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

NIA
Published on

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್ ಸೇರಿ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ.
ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹರಿತವಾದ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ೨೦೨೨ ಜುಲೈ ೨೭ ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅಲ್ಲದೇ ಎನ್‌ಐಎ ಕೂಡ ಯುಎ(ಪಿ) ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಆ.೪ ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು. ಪ್ರಕರಣದಲ್ಲಿ ಇದುವರೆಗೆ ೧೯ ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿ ಮುಸ್ತಫಾ ಪೈಚಾರ್‌ನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಪತ್ತೆ ಹಚ್ಚಿ, ಮೇ ೧೦ ರಂದು ಮನ್ಸೂರ್ ಪಾಷಾ ಎಂಬುವವನೊಂದಿಗೆ ಬಂಧಿಸಲಾಯಿತು. ಮುಸ್ತಫಾ ಪೈಚಾರ್ ಪ್ರಕರಣದ ಪ್ರಮುಖ ಸಂಚುಕೋರನಾಗಿದ್ದು, ರಾಜ್ಯದಲ್ಲಿ ಪಿಎಫ್‌ಐ ಸೇವಾ ತಂಡದ ಮಾಸ್ಟರ್ ಟ್ರೈನರ್ ಆಗಿದ್ದ. ಈತ ಈ ತಂಡವನ್ನು ಮುನ್ನಡೆಸುತ್ತಿದ್ದ. ತನಿಖೆ ವೇಳೆ ಎಚ್.ವೈ.ರಿಯಾಜ್ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದು ಬೆಳಕಿಗೆ ಬಂದಿತ್ತು. ಭಾರತದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆರೋಪಿ ರಿಯಾಜ್ನನ್ನು ಜೂ.೩ ರಂದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಂಧಿಸಲಾಯಿತು. ಐಪಿಸಿಯ ಸೆಕ್ಷನ್ ೧೨೦ ಬಿ ಮತ್ತು ೨೧೨ ಮತ್ತು ಸೆಕ್ಷನ್ ೧೯ ರ ಯುಎ (ಪಿ) ಆಕ್ಟ್‌ನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಎನ್‌ಐಎ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net