

ಬೆಂಗಳೂರು: ಬಿರುಸಿನ ರಾಜಕೀಯ ಬೆಳವಣಿಗೆ ನಡುವೆ ದೇವಸ್ಥಾನಗಳಿಗೆ ಭೇಟಿಕೊಟ್ಟು ಹೋಮಹವನದಲ್ಲಿ ತೊಡಗಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್ ನಡೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ರಾಜಕೀಯ ನಾಯಕರೂ ಸಹ ಅಭಿಪ್ರಾಯಗಳನ್ನೂ ನೀಡಿದ್ದಾರೆ. ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ, ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು. ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ ಎಂದು ಹೇಳಿದರು. ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದರು. ವೆಂಕಟೇಶ್ವರನ ಜತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ನನಗೆ ಪೂಜೆ, ಪುನಸ್ಕಾರ, ವಾಮಚಾರದ ಬಗ್ಗೆ ನಂಬಿಕೆ ಇಲ್ಲ. ಅಸಹಾಯಕರಿಗೆ ಒಳ್ಳೆಯದು ಮಾಡಿದರೆ ಅದೇ ಒಳ್ಳೆಯದು. ಹಿಂದೆ ನನ್ನ ವಿರುದ್ಧ ಮಾಟ, ವಾಮಚಾರದ ಪ್ರಯೋಗ ನಡೆದಿತ್ತು, ಆ ಅನುಭವ ನನಗೆ ಆಗಿದೆ. - ಕೆ.ಎನ್.ರಾಜಣ್ಣ, ಸಹಕಾರ ಸಚಿವ ಎಲ್ಲರನ್ನೂ ದೇವರೇ ಕಾಪಾಡಬೇಕು. ಅಧಿಕಾರಬೇಕು ಎಂದು ದೇವರ ಮೊರೆ ಹೋಗಿದ್ದು ಸಾಮಾನ್ಯ. ಆದರೆ ಎಲ್ಲೋ ಶತ್ರು ನಾಶಕ್ಕೆ ಹೋಗುವುದು ನನಗೆ ಗೊತ್ತಿಲ್ಲ. - ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ