

Price Hike : ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂ. ಜಾಸ್ತಿ ಮಾಡಿ ಉದ್ಘಾಟನೆ ಮಾಡಿ, ಇವರ ಯಾತ್ರೆಗೆ 'ಗಿಫ್ಟ್' ಕಳಿಸಿದ್ದಾರೆ ಎಂದು ಡಿಸಿಎಂ DK ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು" ಎಂದರು.
ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ. ಅವರ ಜನಾಕ್ರೋಶ ಯಾತ್ರೆಯ ವಿರುದ್ಧ ನಾವು ಏನಾದರೂ ಮಾಡಬೇಕಲ್ಲವೇ? ಎಂದು ಹೇಳಿದರು.
ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಕೇವಲ ರಾಜ್ಯ ಸರ್ಕಾರ ಏರಿಸಿದ ಹಾಲಿನ ದರ ಮಾತ್ರ ಕಣ್ಣಿಗೆ ಕಾಣುತ್ತಿದೆಯೇ? ಬಿಜೆಪಿ ರಾಜ್ಯದಲ್ಲಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಡುತ್ತಿರುವ ಯಾತ್ರೆ ಎಂದರು.
ಸಿಎಂ ವಿರುದ್ಧ ಗಣಿ ಗುತ್ತಿಗೆ ಕಿಕ್ ಬ್ಯಾಕ್ ಪಡೆದ ಆರೋಪದ ಬಗ್ಗೆ ಕೇಳಿದಾಗ, "ರಾಜಕೀಯವಾಗಿ ಆರೋಪ ಮಾಡಲು ಪ್ರಯತ್ನ ಮಾಡುತ್ತಿರಬಹುದು. ಇದರಲ್ಲಿ ಯಾವುದೇ ಸತ್ಯವಿಲ್ಲ. ಕಾನೂನಿನ ಚೌಕಟ್ಟು ಬಿಟ್ಟು ಯಾರೂ ಈ ರೀತಿ ಮಾಡಲು ಆಗುವುದಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿಯವರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಎಲ್ಲವು ಸುಳ್ಳು ಆರೋಪ" ಎಂದು ತಿಳಿಸಿದರು.