ಪ್ರಧಾನಿಗಳೇ.. ಅನ್ವರ್ ಮಾಣಿಪ್ಪಾಡಿ ಆರೋಪ ಗಂಭೀರವಾಗಿ ಪರಿಗಣಿಸಿ ವಿಜಯೇಂದ್ರ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿ: CM Siddaramaiah ಆಗ್ರಹ

by (10)
Published on

ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ, ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿನ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಆಗ್ರಹಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ವಿಜಯೇಂದ್ರ ನಮ್ಮ ಮನೆಗೆ ಬಂದು ''ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ, ಇದಕ್ಕಾಗಿ 150 ಕೋಟಿ ರೂ.ಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.

‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ಮಾಧ್ಯಮ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.

ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ, ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಿಎಂ ಸಂದರ್ಭದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟಿಸ್​ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದಿ ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net