

ಬೆಂಗಳೂರು: ಹತ್ರಾಸ್ನಲ್ಲಿ ಗ್ಯಾಂಗ್ರೇಪ್ಗೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಮನೆಗೆ ಭೇಟಿ ಕೊಡಲು ಹೋದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ದೇಶಾದ್ಯಂತ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಿಯಾಂಕಾ ಮತ್ತು ರಾಹುಲ್ ಬಿಡುಗಡೆಗೆ ಆಗ್ರಹಿಸಿದ್ದಾರೆ.
ಟ್ವೀಟ್ ಮಾಡಿರುವ ದೇವೇಗೌಡರು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಉತ್ತರ ಪ್ರದೇಶ ಸರ್ಕಾರ ಅತ್ಯಂತ ಕಾಳಜಿ ಮತ್ತು ಎಚ್ಚರಿಕೆಯಿಂದ ನಡೆಸಿಕೊಳ್ಳಬೇಕು. ಅವರು ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಕೂಡಲೇ ಅವರನ್ನು ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮತ್ತೆ ಕಾಂಗ್ರೆಸ್ ಜತೆ ಮೈತ್ರಿ? -ಎಚ್. ಡಿ.ಕುಮಾರಸ್ವಾಮಿ ಏನು ಹೇಳಿದ್ದಾರೆ ನೋಡಿ…!
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತಿತರರು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವವರ ಮೇಲೆ ಲಾಠಿ ಚಾರ್ಜ್ ಮಾಡಿ, ಬಂಧಿಸಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ.