24ಕ್ಕೆ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಲೋಕಾರ್ಪಣೆ

14..ಪಿವೈಪಿ.01
Published on

ಪಿರಿಯಾಪಟ್ಟಣ/ಬೈಲಕುಪ್ಪೆ: ಜ.24ರಂದು ಹಮ್ಮಿಕೊಂಡಿರುವ ತಾಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಲೋಕಾರ್ಪಣೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಬೇಕು ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಕೊಪ್ಪ ಗ್ರಾಮದ ಬಳಿ ಕಾರ್ಯಕ್ರಮ ಆಯೋಜಿಸಲು ನಿಗದಿಪಡಿಸಿರುವ ಸ್ಥಳವನ್ನು ಭಾನುವಾರ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. 10 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪ್ರಚಾರ ಮಾಡಬೇಕೆಂದು ತಾಪಂ ಇಒ ಸುನೀಲ್ ಕುಮಾರ್‌ಗೆ ಸೂಚಿಸಿದರು.

ನಾನು ಶಾಸಕನಾಗಿದ್ದಾಗ ಆರು ವರ್ಷಗಳ ಹಿಂದೆ ಯೋಜನೆಗೆ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆ ನೆರವೇರಿಸಿದ್ದೆ. ಈಗ ನನ್ನ ಅವಧಿಯಲ್ಲೇ ಪೂರ್ಣಗೊಳಿಸಿ ಸಿಎಂ ಸಿದ್ದರಾಮಯ್ಯ ಅವರಿಂದಲೇ ಲೋಕಾರ್ಪಣೆಗೊಳಿಸುತ್ತಿರುವುದು ಖುಷಿಯ ಸಂಗತಿ. ಉದ್ಘಾಟನೆ ದಿನ ಪ್ರಯೋಗರ್ಥವಾಗಿ ನೀರು ಹರಿಸಲಾಗುವುದು. ಮುಂದಿನ ಮಳೆಗಾಲದಲ್ಲಿ ಎಲ್ಲ ಕೆರೆಗಳಿಗೆ ನೀರು ತುಂಬಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಯೋಜನೆ ಅನುಷ್ಠಾನದಿಂದ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿನ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಹೆಚ್ಚುವುದರ ಜತೆಗೆ, ದನ ಕರುಗಳಿಗೆ ಕುಡಿಯುವ ನೀರು, ಮೀನು ಸಾಕಣೆಗೆ ಉತ್ತೇಜ ದೊರೆಯಲಿದೆ ಎಂದು ತಿಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿದಂತೆ ಜಿಲ್ಲೆಯ ಶಾಸಕರು ಮತ್ತು ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಕಾವೇರಿ ನೀರಾವರಿ ನಿಗಮದ ಎಇಇ ರಘುಪತಿ, ಎಇಇ ಶಿವಕುಮಾರ್, ತಹಸೀಲ್ದಾರ್ ಕುಂಞ ಅಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ನಗರ ಘಟಕದ ಅಧ್ಯಕ್ಷ ಎ.ಕೆ.ಗೌಡ, ಮುಖಂಡರಾದ ಬಿ.ಜೆ.ಬಸವರಾಜ್, ಲೋಕೇಶ್, ಶಿವಕುಮಾರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net