

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಬಹುಕೋಟಿ ಹಗರಣ ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ನಗರದ ಬಿಜೆಪಿ ಕಚೇರಿ ಬಳಿ ಸಮಾವೇಶಗೊಂಡ ಬಳಿಕ ಮುಡಾ ಕಚೇರಿಗೆ ಕಾಲ್ನಡಿಗೆಯಲ್ಲಿ ಸಾಗಿದ ನೂರಾರು ಬಿಜೆಪಿ ಕಾರ್ಯಕರ್ತರನ್ನು ರಾಮಸ್ವಾಮಿ ವೃತ್ತದ ಸಮೀಪವಿರುವ ಮಹಾರಾಜ ಹೋಟೆಲ್ ಬಳಿ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರು, ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಯಿತು. ಮುಡಾ ಕಚೇರಿವರೆಗೆ ಕಾಲ್ನಡಿಗೆಯಲ್ಲಿ ತೆರಳಲು ಅವಕಾಶ ಕೊಡಿ ಎಂದು ಕೇಳಿದರೂ ಪೊಲೀಸರು ಅವಕಾಶ ನೀಡಲಿಲ್ಲ. ಈ ವೇಳೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಕರೆದೊಯ್ದು ನಂತರ ಬಿಡುಗಡೆ ಮಾಡಿದರು.