

ಶಿವಮೊಗ್ಗ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಖಂಡಿಸಿ ಬುಧವಾರ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಮತ್ತು ಸರ್ವಜನ ಹಿತರಕ್ಷಣೆ ಪ್ರಮುಖವಾಗಿದೆ. ಸಮಾಜ ವಿರೋಧಿ, ದೇಶ ವಿರೋಧಿ, ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯವರಿಂದ ಈ ಘಟನೆ ನಡೆದಿದೆ. ಹಿರಿಯ ವಕೀಲರೊಬ್ಬರು ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನಿಸಿದ್ದು ನ್ಯಾಯಾಂಗ ವ್ಯವಸ್ಥೆ ಮತ್ತು ವಕೀಲ ವೃತ್ತಿಗೆ ದೊಡ್ಡ ಅವಮಾನವಾಗಿದೆ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.
ಕರ್ತವ್ಯ ನಿರತ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯುವ ಯತ್ನ ಭಾರತದ ಸಂಸ್ಕೃತಿಯ ಚ್ಯುತಿಯಗಿದೆ. ಇದೊಂದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮವನ್ನು ಕೇಂದ್ರ ಸರ್ಕಾರ ಮತ್ತು ಭಾರತೀಯ ವಕೀಲರ ಪರಿಷತ್ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷೆ ಸರೋಜಾ ಪಿ.ಚಂಗೊಳ್ಳಿ, ಗೌರವಾಧ್ಯಕ್ಷ ಆರ್.ಟಿ.ನಟರಾಜ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ರಫಿ, ರಾಜಮ್ಮ, ಚನ್ನವೀರಪ್ಪ ಗಾಮನಗಟ್ಟಿ, ರಾಚಪ್ಪ, ಸುಲೋಚನಾ, ಪಾಂಡುರಂಗ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.