

ಶಿವಮೊಗ್ಗ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡಲಾಗುವ ಪೌಷ್ಟಿಕ ಆಹಾರಕ್ಕೆ ಜಿಎಸ್‌ಟಿ ವಿಧಿಸಬಾರದು ಎಂದು ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸೇವೆ ಕಾಯಂ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು, ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು ಎಂಬ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಅಂಗನವಾಡಿಗಳಲ್ಲಿ ಪೂರಕ ಪೌಷ್ಟಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ನಮ್ಮ ವೇತನ ಹೆಚ್ಚಿಸಬೇಕು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ವರ್ಗ-3 ಮತ್ತು 4 ಎಂದು ಪರಿಗಣಿಸಿ ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಕನಿಷ್ಠ 26 ಸಾವಿರ ರೂ.ಗೆ ಗೌರವಧನ ಹೆಚ್ಚಿಸಬೇಕು. ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ 15 ಸಾವಿರ ರೂ.ಗೆ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡುಗಂಟು ಮತ್ತು 10 ಸಾವಿರ ರೂ. ಮಾಸಿಕ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತೆರೆಯಬೇಕೆಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು. ಮೊಟ್ಟೆ, ಕಟ್ಟಡದ ಬಾಡಿಗೆ, ಅಡುಗೆ ಅನಿಲ, ತರಕಾರಿ ಖರೀದಿಗೆ ಮುಂಗಡ ಹಣ ನೀಡಬೇಕು. ಅಂಗನವಾಡಿ ಖಾಲಿಯಾದ ಹುದ್ದೆಗಳನ್ನು ಮೂರು ತಿಂಗಳಲ್ಲೇ ಭರ್ತಿ ಮಾಡಬೇಕು. ಸಾಮೂಹಿಕ ಆರೋಗ್ಯ ವಿಮೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಜಿ.ಶೈಲಜಾ, ಪದಾಧಿಕಾರಿಗಳಾದ ಮಂಜುಳಾ, ಎಚ್.ಜಯಲಕ್ಷ್ಮೀ ಇತರರಿದ್ದರು.