ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪ್ರತಿಭಟನೆಗೆ ನಕಾರ : ಸರ್ಕಾರ, ಕಮಿಷನರ್‌ಗೆ ನೋಟಿಸ್

highcourt
Published on

ಬೆಂಗಳೂರು: ರಾಜಕಾಲುವೆ ದುರಸ್ತಿ ಸೇರಿ ಕ್ಷೇತ್ರದ ವಿವಿಧ ಅಭಿವೃದ್ಧಿ, ಮೂಲಸೌಕರ್ಯಗಳ ವಿಚಾರವಾಗಿ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿ ಪೊಲೀಸರು ಕೊಟ್ಟಿರುವ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಪೊಲೀಸರು ನೀಡಿರುವ ಹಿಂಬರಹ ಹಾಗೂ ನೋಟಿಸ್‌ಗಳನ್ನು ಪ್ರಶ್ನಿಸಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರಾಜಿತ ಅಭ್ಯರ್ಥಿ ಎಚ್.ಸಿ. ತಮ್ಮೇಶ್ ಗೌಡ, ಬ್ಯಾಟರಾಯನಪುರ ಮಂಡಲ ಅಧ್ಯಕ್ಷ ಎಂ. ಕೃಷ್ಣಮೂರ್ತಿ ಮತ್ತಿತರರು ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ, ನಗರ ಪೊಲೀಸ್ ಆಯುಕ್ತರು, ಚಿಕ್ಕಜಾಲ, ಅಮೃತಹಳ್ಳಿ, ಯಲಹಂಕ, ಕೊಡಿಗೆಹಳ್ಳಿ, ವಿದ್ಯಾರಣ್ಯಪುರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net