

ಎನ್.ಆರ್.ಪುರ: ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ವಿಲವಾಗಿದೆ ಎಂದು ಆರೋಪಿಸಿ ತಾಲೂಕು ಬಿಜೆಪಿ ರೈತ ಮೋರ್ಚಾಯಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಉಂಟಾಗಿದೆ. ಎಲ್ಲಾ ಜಲಾಶಯಗಳಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತವಾಗಿದೆ. ಹೀಗಾಗಿ ರೈತರು ಬೆಳೆ ಕಳೆದುಕೊಂಡು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ರೈತಪರ ಯೋಜನೆಗಳನ್ನು ಸರ್ಕಾರ ರದ್ದುಗೊಳಿಸಬಾರದು ಎಂದು ಒತ್ತಾಯಿಸಿದರು.
ರೈತರ ಪಂಪ್‌ಸೆಟ್‌ಗಳಿಗೆ ಹಗಲು ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕಾಗಿತ್ತು. ಆದರೆ ಇತ್ತೀಚೆಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಪರಿಣಾಮ ರೈತರಿಗೆ ತೀವ್ರ ಸಮಸ್ಯೆಯಾಗಿದೆ. ಬೆಳೆಗಳನ್ನು ರಕ್ಷಿಸಿಕೊಳ್ಳಲು ಪರದಾಡುವಂತಾಗಿದೆ.
ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ರೈತ ವಿದ್ಯಾ ನಿಧಿ ಯೋಜನೆ, ಭೂ ಸಿರಿ ಯೋಜನೆ, ಶ್ರಮ ಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಎಪಿಎಂಸಿ ಕಾಯ್ದೆ , ಕೃಷಿ ಭೂಮಿ ಮಾರಾಟ ಕಾನೂನು, ಜಿಲ್ಲೆಗೊಂದು ಗೋಶಾಲೆ ಯೋಜನೆ ಇಂತಹ ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಕಾಂಗ್ರೆಸ್ ರೈತರನ್ನು ನಿರ್ಲಕ್ಷಿೃಸುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗಳಿಗೆ ರಾಜ್ಯ ಕೃಷಿ ಸಚಿವರು ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ರೈತ ಮೋರ್ಚಾದ ಪದಾಧಿಕಾರಿಗಳು ತಾಲೂಕು ಕಚೆೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ತಹಸೀಲ್ದಾರ್ ತನುಜಾ ಟಿ.ಸವದತ್ತಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈತ ಮೋರ್ಚಾದ ದ್ವಾರಮಕ್ಕಿ ಅಶ್ವಿನ್, ರಾಜುಪ್ರಸನ್ನ, ಸತ್ಯನಾರಾಯಣ, ಹಂಚಿನಮನೆ ರಾಘವೇಂದ್ರ, ಅರುಣಕುಮಾರ್, ಕಣಿವೆ ಪ್ರಪುಲ್, ಎಲ್.ಮಹೇಶ್, ಪದ್ಮಾಕರ, ಪ್ರವೀಣ ಇತರರಿದ್ದರು.