

ಹಾವೇರಿ: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ನೀರಿನ ಸಂಗ್ರಹ ಉತ್ತಮವಾಗಿದ್ದು, ಬೇಸಿಗೆಯಲ್ಲಿ ಮಳೆಯಾಗುತ್ತಿದ್ದರೂ ಕೂಡ ಮುಂದಿನ ಎರಡು ತಿಂಗಳ ಬೇಸಿಗೆ ಅವಧಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿರುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗ ನೀರಿನ ನಿರ್ವಹಣೆಗೆ ಅಗತ್ಯ ಕ್ರಮ ವಹಿಸಿದರೆ, ಇರುವ ನೀರನ್ನು ಮುಂದಿನ ಎರಡು ತಿಂಗಳ ಕಾಲ ಸಮರ್ಪಕವಾಗಿ ಪೂರೈಕೆ ಮಾಡಲು ಸಾಧ್ಯವಾಗಲಿದೆ. ನೀರಿನ ಸಂಗ್ರಹವಿದೆ ಎಂಬ ಕಾರಣಕ್ಕೆ ನಿರ್ಲಕ್ಷತನ ತೋರದೆ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಹಿಂದಿನ ಸಭೆಗಳಲ್ಲಿ ಗೊತ್ತುಪಡಿಸಿದ ಅವಧಿಯೊಳಗೆ ರ್ಪೂಣಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೆ ನೆರೆವಾಗಿ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತ ಚರ್ಚೆಯ ವೇಳೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಮಾಹಿತಿ ನೀಡಿ, ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವ ಕಾರಣ ಬೇಸಿಗೆಯ ನೀರಿನ ಪೂರೈಕೆಗೆ ಅಗತ್ಯ ನೀರಿನ ಸಂಗ್ರಹವಿದೆ. ನಗರಕ್ಕೆ ಮೂರು ಮೂಲಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ತುಂಗಭದ್ರ, ವರದಾ ಮತ್ತು ಹೆಗ್ಗೇರಿ ಕೆರೆ ಮುಖಾಂತರ ನೀರು ಸರಬರಾಜು ಮಾಡಲಾಗುತ್ತಿದೆ. ಫೆಬ್ರವರಿ ಮಾಹೆಯಲ್ಲಿ ತುಂಗಭದ್ರಾ ನದಿಯಿಂದ 7 ಎಂಎಲ್ಡಿ ಹಾಗೂ ಹೆಗ್ಗೆರೆ ಕೆರೆಯಿಂದ 3 ಎಂ ಎಲ್ಡಿ ನೀರು ಪಡೆದು ಜಿಲ್ಲೆಯ 31 ವಾರ್ಡಗಳಿಗೂ ಪ್ರತಿ 6 ಇಲ್ಲವೇ 9 ದಿನಕ್ಕೊಮ್ಮೆ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದರು.
ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ. ಬಣಕಾರ, ಜಿಪಂ ಸಿಇಒ ರುಚಿ ಬಿಂದಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.